ಬಳ್ಳಾರಿ, 16 ಜೂನ್ (ಹಿ.ಸ.) :
ಆ್ಯಂಕರ್ : ಹದಿಮೂರು ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ಮುಖ್ಯಮಂತ್ರಿಯವರು ಸಮ್ಮತಿಸಿದ್ದು ಶೀಘ್ರದಲ್ಲೇ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕರ್ನಾಟಕದ ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ ಎಂದರು.
. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು.
ರಾಜ್ಯದ ಶಾಲೆಗಳಲ್ಲಿ ಮುಖಚಹರೆ ಆಧಾರಿತ ಹಾಜರಾತಿ ಕಡ್ಡಾಯವಾಗಿ ಮಾಡಲಾಗುತ್ತಿದ್ದು, ಈಗಾಗಲೇ ಈ ಕುರಿತು ಪ್ರಾಯೋಗಿಕ ಹಂತ ನಡೆಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಹ ಶಾಲೆಗೆ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು.
*ನೀತಿ ಶಿಕ್ಷಣ ಅಳವಡಿಕೆ:*
ಮಕ್ಕಳಲ್ಲಿ ನೀತಿ ಶಿಕ್ಷಣ ಬಹುಮುಖ್ಯವಾಗಿದ್ದು, ಪ್ರಸ್ತುತದಿಂದಲೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಹತ್ತನೇಯ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮಾನವೀಯ ಮೌಲ್ಯಗಳ ಕುರಿತು ನೀತಿ ಶಿಕ್ಷಣ ಬೋಧಿಸಲಾಗುತ್ತಿದೆ. ಇದಕ್ಕೆ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದರು.
ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಬಿಪಿಎಸ್ಸಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮಹಿಪಾಲ್ ಸೇರಿದಂತೆ ಮುಖಂಡರು ಹಾಗೂ ಇತರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್