ಬಳ್ಳಾರಿ, 20 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದ್ದಾರೆ.
ಮಹನೀಯರ ಜಯಂತಿಗಳ ಆಚರಣೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವೀಡಿಯೋ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ನಿರ್ಧಾರ ಕೈಗೊಳ್ಳಲಾಯಿತು.
ಜೂ.27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಚರಿಸಲಾಗುವುದು. ವೇದಿಕೆ ವ್ಯವಸ್ಥೆ ಮತ್ತು ಅಲಂಕಾರ, ಆಸನಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಕೆಂಪೇಗೌಡ ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ನಡೆಯಲಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕು. ಮೆರವಣಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮಗಳನ್ನು ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಮುಖಂಡರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನನು ಆಹ್ವಾನಿಸಬೇಕು. ಮಹನೀಯರ ಸಾಧನೆ ಮತ್ತು ಕಾರ್ಯಗಳ ಬಗ್ಗೆ ಬಿತ್ತರಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಸಬೇಕು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ-ತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಶಾಲೆ-ಪಿಯು ಕಾಲೇಜುಗಳಲ್ಲಿ ಕೆಂಪೇಗೌಡರ ಕುರಿತಾಗಿ ಪ್ರಬಂಧ, ಚಿತ್ರಕಲೆ, ಆಶುಭಾಷಣ, ವಿಚಾರಗೋಷ್ಠಿ ಮತ್ತು ಜಾಥಾ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್