ಬೆಂಗಳೂರು, 28 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಐಪಿಎಲ್‌ನ ನಂತರ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶದ ರಾಜ್ಯ ಸರ್ಕಾರದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಘಟನೆಯಲ್ಲಿ 11 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದರೆ, ಹಲವರು ಗಾಯಗೊಂಡಿದ್ದರು.
ಈ ದುರಂತದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪಿಸಿ ರಾಜ್ಯ ಸರ್ಕಾರ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಬೆಂಗಳೂರು ನಗರ ಪೋಲಿಸ್ ಆಯುಕ್ತರಾಗಿದ್ದ ಬಿ.ದಯಾನಂದ್, ಉಪ ಪೋಲಿಸ್ ಆಯುಕ್ತ ವಿಕಾಸ್ ಕುಮಾರ್ ಹಾಗೂ ಶೇಖರ್
ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.
ಅವರ ವಿರುದ್ಧದ ಕ್ರಮವನ್ನು ರಾಜ್ಯ ಸರ್ಕಾರ ಡಿಪಿಎಆರ್ ಮೂಲಕ ಕೇಂದ್ರಕ್ಕೆ ವರದಿ ಮಾಡಿದ್ದು, ಇದೀಗ ಕೇಂದ್ರ ಸರ್ಕಾರ ಈ ವರದಿಯನ್ನು ಪರಿಗಣಿಸಿ ಅನುಮೋದನೆ ನೀಡಿದೆ.
ಆರ್‌ಸಿಬಿ ತಂಡದ ವಿಜಯೋತ್ಸವವನ್ನು ಆಚರಿಸಲು ಸಾವಿರಾರು ಅಭಿಮಾನಿಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ನೆರೆದಿದ್ದರು. ಭಾರಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ ಕಾರಣವಾಗಿ ೧೧ ಜನ ಮೃತಪಟ್ಟು ಹಲವರು ಗಾಯಗೊಂಡಿದ್ದರು.
ಘಟನೆ ನಂತರ ತನಿಖಾ ಸಮಿತಿ ರಚಿಸಲಾಗಿದ್ದು, ಅದರ ಶಿಫಾರಸುಗಳ ಆಧಾರದಲ್ಲಿ ಅಧಿಕಾರಿಗಳ ಕರ್ತವ್ಯ ಲೋಪವನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಅಮಾನತು ಕ್ರಮ ಕೈಗೊಂಡಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa