ರಾಯಚೂರು, 03 ಜೂನ್ (ಹಿ.ಸ.) :
ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಬಾಲ್ಯವಿವಾಹ ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಒಂದು ವೇಳೆ ಬಾಲ್ಯವಿವಾಹಗಳಿಗೆ ಯಾರಾದರು ಸಹಕರಿಸುತ್ತಿರುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಮ ಪಾಂಡ್ವೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜೂನ್ 2ರಂದು ಭೇಟಿ ನೀಡಿ ಸಿಡಿಪಿಒಗಳು, ಮಹಿಳಾ ಕಲ್ಯಾಣ ಅಧಿಕಾರಿ, ಮಕ್ಕಳ ರಕ್ಷಣಾ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲು ಇಲಾಖೆಯ ಅಧಿಕಾರಿಗಳು ಇದುವರೆಗೂ ಯಾವ ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆದುಕೊಂಡ ಸಿಇಓ ಅವರು, ಎಸ್ಎಎಂ ಹಾಗೂ ಎಂಎಎಂ ಪ್ರಕರಣಗಳನ್ನು ಕಡಿತಗೊಳಿಸಲು ರೂಪಸಿಲಾಗಿರುವ ಯೋಜನೆಗಳ ಬಗ್ಗೆ ಚರ್ಚಿಸಿದರು.
ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜವಾಬ್ದಾರಿ ಹೆಚ್ಚು ಇದೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ, ಆತ್ಮಸಾಕ್ಷಿಯಾಗಿ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
ಅಂಗನವಾಡಿ ಕೇಂದ್ರಗಳನ್ನು ಶುಚಿಯಾಗಿಡಲು ಹಾಗೂ ಕೇಂದ್ರಗಳನ್ನು ಆಕರ್ಷಕವಾಗಿ ನಿರ್ವಹಿಸುವ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ನೀಡುವ ಬಗ್ಗೆ ಕ್ರಮ ಜರುಗಿಸುವುದಾಗಿ ಸಿಡಿಪಿಒಗಳಿಗೆ ಸಿಇಓ ಅವರು ತಿಳಿಸಿದರು.
ಹದಿಹರೆಯದವರ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಪೌಷ್ಠಿಕಾಂಶ ಪೂರೈಕೆ ಮಾಡಬೇಕು. ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ನಿವೇಶನ ಒದಗಿಸಲು ಆಯಾ ಗ್ರಾಮ ಪಂಚಾಯತಿಗಳು ಕ್ರಮ ಜರುಗಿಸುವಂತೆ ಸಿಇಓ ಅವರು ಸೂಚನೆ ನೀಡಿದರು.
ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ವ್ಯವಸ್ಥೆ ಕಲ್ಪಿಸಬೇಕೆಂದು ಇಲಾಖೆಯ ಅಧಿಕಾರಿಗಳು ಸಿಇಓ ಅವರ ಗಮನಕ್ಕೆ ತಂದರು.
ತೀವ್ರ ಹಾಗೂ ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೈಕೆ ಹಾಗೂ ಅಪೌಷ್ಠಿಕತೆ ನಿವಾರಣಾ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ಪಾಲಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಬೇಕು ಹಾಗೂ ನ್ಯೂಟ್ರಿಷನ್ ಪುನರ್ವಸತಿ ಕೇಂದ್ರಗಳನ್ನು ಬಲಪಡಿಸಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್