ಬೆಂಗಳೂರು, 01 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 3 ರಂದು ನಡೆದ ಐಪಿಎಲ್ ವಿಜಯೋತ್ಸವ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಪಡಿಸಿದೆ.
ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಹಾಗೂ ಸಂತೋಷ್ ಮೆಹ್ರಾ ಅವರ ನೇತೃತ್ವದ ಸಿಎಟಿ ಪೀಠ ಈ ಆದೇಶ ನೀಡಿದ್ದು, ವಿಕಾಸ್ ಕುಮಾರ್ ಅವರಿಗೆ ಹಿಂದಿನ ಹುದ್ದೆ, ಭತ್ಯೆ ಹಾಗೂ ಸೌಲಭ್ಯಗಳನ್ನು ಮರಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿದ್ದರೆ, ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಸಮಯ ಕೇಳಿದ್ದರು. ವಿಚಾರಣೆಯ ನಂತರ ನ್ಯಾಯಮಂಡಳಿ ಅವರ ಅಮಾನತನ್ನು ಸರಿಯಾದ ತತ್ವ ಹಾಗೂ ಕ್ರಮದಡಿ ಕೈಗೊಂಡಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.
ಜೂನ್ 3 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ವಿಜಯೋತ್ಸವ ಕಾರ್ಯಕ್ರಮದ ವೇಳೆ ಲಕ್ಷಾಂತರ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಹೊಣೆಗಾರಿಕೆ ಯಾರೆಂಬುದರ ಬಗ್ಗೆಯೂ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಘಟನೆ ಬಳಿಕ ವಿಕಾಸ್ ಕುಮಾರ್ ಅವರನ್ನು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸ್ಥಾನದಿಂದ ಅಮಾನತುಗೊಳಿಸಲಾಗಿತ್ತು. ಆದರೆ ಅವರು ಈ ಕ್ರಮದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa