ಬೆಂಗಳೂರು, 14 ಜುಲೈ (ಹಿ.ಸ.) :
ಆ್ಯಂಕರ್ : ತಾನು ಕೊಡ, ಪರರನ್ನು ಕೊಡಲು ಬಿಡ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶರಾವತಿ ಹಿನ್ನೀರು ಭಾಗದ ಜನರ 60 ವರ್ಷಗಳ ಕನಸು ಈಡೇರುತ್ತಿರುವ ಇವತ್ತಿನ ಸಂತೋಷದ ದಿನವನ್ನ ಅಲ್ಲಿನ ಜನಸಾಮಾನ್ಯರು ತಮ್ಮ ಮನೆಯ ಹಬ್ಬದಂತೆ ತೋರಣ ಕಟ್ಟಿ, ಹೂವುಗಳಿಂದ ಅಲಂಕಾರ ಮಾಡಿ ಸಂಭ್ರಮ ಪಡುತ್ತಿದ್ದಾರೆ.
ಆದರೆ ಒಲ್ಲದ ಗಂಡ ಮೊಸರಲ್ಲಿ ಕಲ್ಲು ಹುಡುಕಿದ ಎನ್ನುವಂತೆ ನಾಡಿನ ಮುಖ್ಯಮಂತ್ರಿಗಳಾಗಿ ಇಂತಹ ಐತಿಹಾಸಿಕ ಸುದಿನದಂದು ಅಲ್ಲಿನ ಜನರ ಸಂಭ್ರಮದಲ್ಲಿ ಪಾಲ್ಗೊಳ್ಳುವ ಬದಲು ಇಲ್ಲಸಲ್ಲದ ಕ್ಯಾತೆ ತೆಗೆದಿದ್ದೀರಲ್ಲ ಸ್ವಾಮಿ, ನಿಮ್ಮ ಭಂಡತನಕ್ಕೆ ಏನು ಹೇಳೋಣ.
60 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಸಾಧ್ಯವಾಗದ್ದನ್ನು ಪ್ರಧಾನಿ ನರೇಂದ್ರ ಮೋದಿಯವರ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಾಡಿ ತೋರಿಸಿತು ಎನ್ನುವ ಹೊಟ್ಟೆ ಉರಿನಾ? ಅಥವಾ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ರಾಹುಲ್ ಗಾಂಧಿ ಅವರು ಆದೇಶ ಮಾಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಹೈಕಮಾಂಡ್ ನಾಯಕರು ಕರೆದರೆ ಕುರ್ಚಿ ಉಳಿಸಿಕೊಳ್ಳಲು ಎಲ್ಲಾ ಕೆಲಸ ಬಿಟ್ಟು ವಿಶೇಷ ವಿಮಾನದಲ್ಲಿ ದೆಹಲಿಗೆ ಓಡಿ ಹೋಗುತ್ತೀರಿ, ಸಿಗಂದೂರು ಸೇತುವೆ ಉದ್ಘಾಟನೆಗೆ ಹೋಗಲು ಮನಸ್ಸಿಲ್ಲವಾ?
ನಿಮ್ಮಂತಹವರನ್ನು ಮುಖ್ಯಮಂತ್ರಿಗಳಾಗಿ ಪಡೆದ ಕನ್ನಡಿಗರು ನಿಜಕ್ಕೂ ನತದೃಷ್ಟರು ಎಂದು ಅಶೋಕ ವಾಗ್ದಾಳಿ ನಡೆಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa