ಬಳ್ಳಾರಿ, 15 ಜುಲೈ (ಹಿ.ಸ.) :
ಆ್ಯಂಕರ್ : ಪ್ರತಿಯೊಬ್ಬರಿಗೂ ಆರೋಗ್ಯವು ಬಹಳ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಆರೋಗ್ಯ ನಿರ್ವಹಣೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕೋಶ ಬಳ್ಳಾರಿ ಇವರ ಸಹಯೋಗದಲ್ಲಿ ಮಂಗಳವಾರ ನಡೆದ `ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಮತ್ತು ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಜೀವನದಲ್ಲಿ ಆರೋಗ್ಯವೇ ಮಹಾಭಾಗ್ಯ. ಕರ್ನಾಟಕ ಸರ್ಕಾರವು ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಿರುವುದು ಬಡವರ್ಗದ ಜನರಿಗೆ ಬಹಳ ಉಪಯುಕ್ತವಾಗಿದೆ ಎಂದರು.
ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕರ್ನಾಟಕ ಸರ್ಕಾರದ ಗೃಹ ಆರೋಗ್ಯ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟಗಳಲ್ಲಿ ವ್ಯಾಪಕ ಪ್ರಚಾರ ನಡೆಸಲಾಗುತ್ತದೆ ಎಂದರು.
ಡಾ.ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಮನೆ-ಮನೆಗೆ ಆರೋಗ್ಯ ತಪಾಸಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಯಾಗಿದ್ದು, ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾದ ನಂತರ 14 ರೀತಿಯ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ರಾಜ್ಯಾದ್ಯಂತ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು, ಗೃಹ ಆರೋಗ್ಯ ಯೋಜನೆ ಜಿಲ್ಲೆಯಾದ್ಯಂತ ವಿಸ್ತರಣೆಯಾಗಿದೆ. ಎಲ್ಲ ಮನೆಗಳಲ್ಲಿ 30 ವಷ ಮೇಲ್ಪಟ್ಟವರನ್ನ ತಪಾಸಣೆ ಮಾಡಿ, ಔಷಧಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದರು.
ಈ ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಉಚಿತವಾಗಿ ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ ಮತ್ತು ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗುವರು. ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನ ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ ಎಂದರು.
ಇದೇ ವೇಳೆ ಗಣ್ಯರು “ಆಶಾ ಕೈಪಿಡಿ” ಪುಸ್ತಕವನ್ನು ಅನಾವರಣಗೊಳಿಸಿದರು.
14 ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣೆ ಮತ್ತು ಔಷಧ ವಿತರಣೆ: ಆಶಾ ಕಾರ್ಯಕರ್ತೆಯರು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಜಾಗೃತಿ ಮೂಡಿಸಿ, ಆರೋಗ್ಯ ತಪಾಸಣೆಗಾಗಿ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕಳುಹಿಸಬೇಕು. ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (ಎಎಎಂ) ಆರೋಗ್ಯ ತಪಾಸಣೆ ನಡೆಸಿ, ಎನ್‍ಸಿಡಿ ಪೆÇೀರ್ಟಲ್‍ಗೆ ಡೇಟಾ ನಮೂದಿಸುತ್ತಾರೆ. ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗಳಿಗೆ ಕಳುಹಿಸಬೇಕು ಎಂದರು.
ಬಳ್ಳಾರಿ ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಡಿ.ಸುಕುಂ, ಜಿಲ್ಲಾ ಪ್ರಭಾರಿ ಕುಟುಂಬ ಕಲ್ಯಾಣಾಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ಗೃಹ ಆರೋಗ್ಯ ಯೋಜನೆ ಅನುಷ್ಠಾನಧಿಕಾರಿ ಡಾ. ಮರಿಯಂಬಿ ವಿ.ಕೆ., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರ ಕುಮಾರ್ ಸೇರಿದಂತೆ ವೈದ್ಯರು, ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್