ಬಳ್ಳಾರಿ, 16 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಗಂಗಾವತಿಯ ಸೇಂಟ್ ಫಾಲ್ಸ್ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾಗಿ ಕಾನೂನುಗಳು, ವಿಶೇಷವಾಗಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆಯಾದ ಯಮನಮ್ಮ ರವರು ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ತಿದ್ದುಪಡಿ-2016 ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು, ಮಕ್ಕಳ ಹಕ್ಕುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಗಂಗಾವತಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಶಿವಶರಣಪ್ಪ ಇವರು ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮಕ್ಕೆ ಮಕ್ಕಳನ್ನು ಠಾಣೆಗೆ ಕರೆತರುವಂತೆ ಶಾಲಾ ಮುಖ್ಯಸ್ಥರಿಗೆ ತಿಳಿಸಿದರು ಮತ್ತು (ಆನ್‌ಲೈನ್ ಸೇಫ್ಟಿ) ಇಂಟರ್ ನೇಟ್ ಬಳಕೆಯ ಸುರಕ್ಷತೆಯ ಬಗ್ಗೆ ಸವಿಸ್ತಾರವಾಗಿ ಮಕ್ಕಳಿಗೆ ತಿಳಿಸಿದರು.
ಮಕ್ಕಳ ಸಹಾಯವಾಣಿ-1098 ನ ವಿಷಯ ನಿರ್ವಾಹಕರಾದ ಬಸಮ್ಮ ಅವರು ಮಕ್ಕಳ ಸಹಾಯವಾಣಿ-1098 ಕಾರ್ಯವೈಖರಿ, ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುಷ್ಠಾನದ ಕುರಿತು ಹಾಗೂ ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶೃತಿ ವಹಿಸಿದ್ದರು. ಶಿಕ್ಷಕರಾದ ಶರಣಪ್ಪ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸರ್ವೇಶ್ ವಸ್ತçದ, ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾವೇರಿ ಸೇರಿದಂತೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್