ಕೊಪ್ಪಳ, 22 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಕೊಪ್ಪಳ, ತಾಲೂಕು ಬಾಲ ಭವನ ಸಮಿತಿ ಕೊಪ್ಪಳ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಕೊಪ್ಪಳದ ಶ್ರೀಶೈಲ್ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಅವರು ಮಾತನಾಡಿ, ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಮಕ್ಕಳಿಗೆ ಇಂತಹ ಸ್ಪರ್ಧೆಗಳು ಉಪಯೋಗವಾಗಿದ್ದು, ಇಂತಹ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸಬೇಕಾಗಿದೆ ಎಂದು ಮಕ್ಕಳಿಗೆ ಹೇಳಿದರು.
ಈ ಶಾಲೆಯ ಮುಖ್ಯೋಪಾಧ್ಯರು ಹಾಗೂ ಸಹ ಶಿಕ್ಷಕರು ವೃಂದದವರು ಮಕ್ಕಳ ಶ್ರೇಯಸ್ಸಿಗೆ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಒಳ್ಳೆಯ ಪ್ರತಿಭೆಗಳು ಹೊರಹೊಮ್ಮಲು ಸಹಕಾರಿಯಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಅವರು ಮಾತನಾಡಿ, ಮಕ್ಕಳು ತಮ್ಮ ಕಲೆಯನ್ನು ಪ್ರದರ್ಶಿಸಲು ಇಂತಹ ಸ್ಪರ್ಧೆಗಳು ಅವಶ್ಯಕವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಶೈಲನಗರ ಸರಕಾರಿ ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಯರಾದ ಬಾಲನಾಗಮ್ಮ ಅವರು ಮಾತನಾಡಿ ಮಕ್ಕಳಿಗೆ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಅವಶ್ಯಕವಾಗಿವೆ. ಮಕ್ಕಳು ತಮ್ಮ ಕಲೆಯನ್ನು ಪ್ರದರ್ಶಸಿಲು ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಅನುಕೂಲವಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಆರ್.ಸಿ ಸಮನ್ವಯ ಅಧಿಕಾರಿ ಸೈಯದ್ ಮೆಹಬೂಬ್ ಹುಸೇನ್, ಶಾಲೆಯ ಎಲ್ಲಾ ಸಹ ಶಿಕ್ಷಕರ ವೃಂದ ಹಾಗೂ ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಬಕೇಟ ವಿತ್ ಬಾಲ್ ಸ್ಪರ್ಧೆ ಮತ್ತು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ಗಣ್ಯರಿಂದ ವಿತರಿಸಲಾಯಿತು. ಮುಸ್ತಫಾ ಅವರು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬಸಾಬ ಇಲಾಹಿ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ಗಿರಿಜಾ ಅವರು ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್