ವಿಜಯಪುರ, 23 ಜುಲೈ (ಹಿ.ಸ.) :
ಆ್ಯಂಕರ್ : ನಾನಾ ಸಣ್ಣ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಅವರು ಮಾತನಾಡಿದರು.
ರಾಜ್ಯದಾದ್ಯಂತ ನಾನಾ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಷ್ಟೇನೂ ಸಬಲರಾಗಿರುವುದಿಲ್ಲ. ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೂ ದೊರೆತು ಅವರ ಜೀವನಮಟ್ಟ ಸುಧಾರಣೆಗೊಳ್ಳಲಿ ಎಂದು ಸರ್ಕಾರ ಸದುದ್ದೇಶ ಹೊಂದಿ, ನಾನಾ ಯೋಜನೆಗಳಡಿ ಈ ಕಾರ್ಮಿಕರನ್ನು ಒಳಪಡಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಅಸಂಘಟಿತ ವಲಯದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಸೌಲಭ್ಯ ಒದಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರ ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಅಧಿನಿಯಮ 2024ನ್ನು ಜಾರಿಗೆ ತಂದಿದ್ದು, ಇದಕ್ಕನುಗುಣವಾಗಿ ನಿಯಮಾವಳಿಗಳನ್ನು ರೂಪಿಸಿ ಮಂಡಳಿ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಮಂಡಳಿ, ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024, ಕರ್ನಾಟಕ ಪ್ಲಾಟ್‍ಫಾರ್ಮ ಆಧಾರಿತ ಗಿಗ್ ಕಾರ್ಮಿಕರ ಅಧಿನಿಮ-2025, ಕಾರ್ಮಿಕರಿಗೆ ಸುರಕ್ಷತೆ ಒದಗಿಸುವ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಸೇರಿದಂತೆ ಮಂಡಳಿ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 30 ರಿಂದ 40 ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಈ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಸರ್ಕಾರದಿಂದ ಜಾರಿಗೊಂಡಿರುವ ಸೌಲಭ್ಯಗಳು ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಒದಗಿಸಲಾಗುತ್ತಿದ್ದು, ಈವರೆಗೆ ರಾಜ್ಯದಲ್ಲಿ 25,45,607 ಕಾರ್ಮಿಕರು ನೊಂದಣಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 102971 ನೊಂದಾಯಿಸಿಕೊಂಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆದು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ್, ಸಮಯ ಪಾಲಕರು, ಕಾವಲುಗಾರ ಹಾಗೂ ಪರಿಚಾರಕರು, ಮೋಟಾರ್ ಗ್ಯಾರೇಜ್‍ಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಸೇರಿದಂತೆ ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಸೌಲಭ್ಯದಡಿ ಒಳಪಡಿಸಲಾಗಿದೆ ಎಂದು ಅವರು ಹೇಳಿದರು.
ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದರ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೊಸಾಯಿಟಿ ರಚನೆ ಮಾಡಿ ಸೊಸಾಯಿಟಿ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಹೆಚ್ಚೆಚ್ಚು ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಶಾ ದೀಪ ಯೋಜನೆಯನ್ನು ಜಾರಿಗೊಳಿಸಿ ಮಾಲೀಕರು ಹಾಗೂ ಉದ್ಯೋಗದಾತರನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸರ್ಕಾರ ಜಾರಿಗೊಳಿಸಿರುವ ಪಂಚ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಹಸನಗೊಳಿಸಿದೆ. ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಪ್ರಯಾಣ ಬೆಳೆಸಲಾಗಿದೆ. ಸರ್ಕಾರದಿಂದ ಪಂಚ್ ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಲ್ಲ ವರ್ಗದ ಜನರನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಡಿ ಸೌಲಭ್ಯಗಳನ್ನು ದೊರಕಿಸಲಾಗುತ್ತಿದೆ ಎಂದು ಅವರು ಹೇಳಿದರು.
ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ. ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸುವ ಮೂಲಕ ದುರ್ಬಲ ವರ್ಗದವರನ್ನು ನಾನಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಾರ್ಮಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಬದುಕನ್ನು ಸುಭದ್ರಗೊಳಿಸಿಕೊಳ್ಳುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 15 ಜನ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು. ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರದಡಿ ಇಬ್ಬರಿಗೆ ಪರಿಹಾರ ಚೆಕ್, ಅಪಘಾತದಿಂದ ಮರಣ ಹೊಂದಿದ ಇಬ್ಬರೂ ಕಾರ್ಮಿಕರ ಮಕ್ಕಳಿಗೆ ತಲಾ 10 ಸಾವಿರ ರೂ. ಚೆಕ್ ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಮರಣ ಹೊಂದಿದ ಕಾರ್ಮಿಕರ ಅವಲಂಬಿತರಿಗೆ 10 ಸಾವಿರ ರೂ.ಗಳ ಚೆಕ್‍ನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಬಿ.ರವಿಕುಮಾರ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande