ಕೊಪ್ಪಳ, 24 ಜುಲೈ (ಹಿ.ಸ.) :
ಆ್ಯಂಕರ್ : ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದ್ದಾರೆ.
ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ಯ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಆಗಸ್ಟ್ 15ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನಡೆಯಲಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಹಾಗೂ ಸರ್ಕಾರದ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕ್ರೀಡಾ ಇಲಾಖೆ ಮತ್ತು ನಗರಸಭೆಯಿಂದ ಕೈಗೊಳ್ಳಬೇಕು. ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಪಥಸಂಚಲನವು ಶಿಸ್ತುಬದ್ಧ ಮತ್ತು ಅಚ್ಚುಕಟ್ಟಾಗಿರಬೇಕು. ಇದಕ್ಕಾಗಿ ಸಂಬಂಧಿಸಿದ ತಂಡಗಳಿಗೆ ಅಗತ್ಯ ಪೂರ್ವಭಾವಿ ತರಬೇತಿ ನೀಡಬೇಕು. ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಈ ಭಾಗದ ಸಾತಂತ್ರ್ಯ ಚಳುವಳಿಗಳನ್ನು ಬಿಂಬಿಸುವಂತಹ ವಿಷಯ ಹೊಂದಿರಬೇಕು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಸಾರಿಗೆ ಇಲಾಖೆಯಿಂದ ಬಸ್ ಸೌಕರ್ಯ ಒದಗಿಸಬೇಕು. ಮಕ್ಕಳಿಗೆ ಹಾಲು ಅಥವಾ ಲಘು ಉಪಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನಳನ್ನು ಕ್ರೀಡಾಂಗಣದಲ್ಲಿ ಕಾಯ್ದಿರಿಸಬೇಕು. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, ತಾಲೂಕು ಮಟ್ಟದಲ್ಲಿಯೂ ಧ್ವಜ ಸಂಹಿತೆಯನ್ನು ಪಾಲಿಸಿ ವ್ಯವಸ್ಥಿತ ಧ್ವಜಾರೋಹಣ ಮಾಡಲು ಆಯಾ ತಾಲ್ಲೂಕಿನ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ತಮಗೆ ನೀಡಿದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು. ಪಥಸಂಚಲನದಲ್ಲಿ ನಿಗದಿಪಡಿಸಿದ ತಂಡಗಳು ಭಾಗವಹಿಸಬೇಕು. ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಇದ್ದಲ್ಲಿ ಅಂತಹ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಹಾಗೂ ಸಂಬಂಧಪಟ್ಟ ಸಮಿತಿಗೆ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡುರ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಜಿಲ್ಲಾ ಕ್ರೀಡಾಧಿಕಾರಿ ವಿಠ್ಠಲ ಜಾಬಗೌಡರ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್