ರಾಯಚೂರು, 25 ಜುಲೈ (ಹಿ.ಸ.) :
ಆ್ಯಂಕರ್ : ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಟಾಸ್ಕ್ ಪೋರ್ಸ್ ಸಮಿತಿ ತಂಡದೊಂದಿಗೆ ರಾಯಚೂರಿನ ಮಡ್ಡಿಪೇಟೆಯ ಶ್ರೀ ವೀರಭದ್ರೇಶ್ವರ ಆಯಿಲ್ ಮರ್ಚೆಂಟ್ಸ್, (ಗಾಣದ ಮರ್ಚೆಂಟ್ಸ್) ಮೇಲೆ ಹಠಾತ್‍ದಾಳಿ ಕೈಗೊಂಡು ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಅಪ್ರಾಪ್ತ ವಯಸ್ಸಿನ ಮಗುವನ್ನು ರಕ್ಷಣೆ ಮಾಡಿ ರಾಯಚೂರಿನ ಸರ್ಕಾರಿ ಬಾಲಕರ ಬಾಲಮಂದಿರ ಒಪ್ಪಿಸಲಾಗಿದೆ.
ಮಗುವನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ನಗರದ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥರೆಡ್ಡಿ, ರಾಯಚೂರಿನ 1ನೇ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಹ್ಮದ್ ಉಮರ್ ಅಬ್ದುಲ್ ಘನಿ, ರಾಯಚೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಬಿ.ಆರ್.ಪಿ ಹರೀಶ್, ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ, ಮಕ್ಕಳ ಸಹಾಯವಾಣಿ ಘಟಕದ ವಿಷಯ ನಿರ್ವಾಹಕ ಮಹೇಶ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‍ರೀಚ್ ವರ್ಕರ್ ದಿನೇಶ ಸೇರಿದಂತೆ ಇತರರು ದಾಳಿ ನಡೆಸಿದ್ದರು.
ಜಾಗೃತಿ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಒಂದು ವೇಳೆ ದುಡಿಸಿಕೊಂಡಲ್ಲಿ 50 ಸಾವಿರ ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್