ಗದಗ, 25 ಜುಲೈ (ಹಿ.ಸ.) :
ಆ್ಯಂಕರ್ : ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಯೋಜನೆಗಳು ಜಾರಿಯಾಗಿದ್ದು ಅವುಗಳ ಸೌಲಭ್ಯ ಸಮರ್ಪಕ ರೀತಿಯಲ್ಲಿ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ / ಅರೆ ಅಲೆಮಾರಿ ಜನಾಂಗದವರ ಸಲಹಾ ಸಮಿತಿ/ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಶಿಕ್ಷಣ, ಹಾಸ್ಟೆಲ್ ಸೌಲಭ್ಯ, ವಸತಿ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿಗಳು ಯಾವ ಪ್ರದೇಶಗಳಲ್ಲಿ ಇನ್ನೂ ಆರೋಗ್ಯ ತಪಾಸಣೆ ಆಗಿರುವುದಿಲ್ಲ ಅಂತಹ ಪ್ರದೇಶಗಳ ಸಮೀಕ್ಷೆ ನಡೆಸಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕೆಂದು ಸೂಚಿಸಿದರು. ಒಟ್ಟಾರೆಯಾಗಿ ಸರ್ಕಾರದ ಸವಲತ್ತುಗಳನ್ನು ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಒದಗಿಸಿ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮಹಬೂಬ ತುಂಬರಮಟ್ಟಿ ಮಾತನಾಡಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ 1 ರಿಂದ 10 ನೇ ತರಗತಿಯವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಮಾಹೆಯಾನ 200 ರೂ. ಶಿಷ್ಯವೇತನ ನೀಡಲಾಗುತ್ತಿದೆ. 2024-25 ನೇ ಸಾಲಿನಲ್ಲಿ ಜಿಲ್ಲೆಯ 340 ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 8,80,000 ರೂ ವಿದ್ಯಾರ್ಥಿ ವೇತನ ಮಂಜೂರು ಮಾಡಿದೆ. ಮೆಟ್ರಿಕ್ ನಂತರದ 151 ವಿದ್ಯಾರ್ಥಿಗಳಿಗೆ 12,73,000 ರೂ. ವಿದ್ಯಾರ್ಥಿ ವೇತನ ಮಂಜೂರು ಮಾಡಿದೆ. ಅಲೆಮಾರಿ/ ಅರೆ ಅಲೆಮಾರಿ ವಸತಿ ಯೋಜನೆಯಡಿ 2022-23 ನೇ ಸಾಲಿಗೆ ಗದಗ ಜಿಲ್ಲೆಗೆ 71 ಮನೆಗಳನ್ನು ನಿಗದಿಪಡಿಸಲಾಗಿದೆ. 2025-26 ನೇ ಸಾಲಿನಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳ ಸಿಸಿ ರಸ್ತೆ, ಹೈಮಾಸ್ಕ್ ನಿರ್ಮಾಣ ಕುರಿತ ವಿವರಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಕೆಂಚಪ್ಪ ಹೆಳವರ, ವಿಠಲ ಗಣಾಚಾರಿ, ರಾಜೇಂದ್ರ ಬೈಲಪತ್ತಾರ, ಮಣಿಕಂಠ ಶ್ರೀನಿವಾಸ, ಎಂ.ಎಚ್.ಮಕಾನದಾರ ಹಾಗೂ ಜಿಲ್ಲಾ ಸಲಹಾ ಸಮಿತಿ ಸದಸ್ಯರಾದ ಹರೀಶ ಪೂಜಾರ್ ಅವರುಗಳು ಸಭೆಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿರ್ಮಲಾ,ಯೋಜನಾ ನಿರ್ದೇಶಕರಾದ ಚಳಗೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ , ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP