ಝಲಾವರ್, 25 ಜುಲೈ (ಹಿ.ಸ.) :
ಆ್ಯಂಕರ್ : ರಾಜಸ್ಥಾನದ ಝಲಾವರ್ ಜಿಲ್ಲೆಯ ದಂಗಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಿಪ್ಲೋಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಶಾಲೆಯ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಅನೇಕ ಮಕ್ಕಳು ಅವಶೇಷಗಳಡಿ ಸಿಲುಕಿದ್ದು, ನಾಲ್ಕು ಮಕ್ಕಳು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮಸ್ಥರು ಹಾಗೂ ಪೊಲೀಸರ ಸಹಯೋಗದಿಂದ ರಕ್ಷಣಾ ಕಾರ್ಯಾಚರಣೆ ತಕ್ಷಣ ಆರಂಭಗೊಂಡಿದ್ದು, ಪ್ರಸ್ತುತ ಸ್ಥಳದಲ್ಲಿ ತೀವ್ರ ಶೋಧ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 15ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಇದುವರೆಗೆ ಅನೇಕ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ನಾಲ್ಕು ಮಕ್ಕಳ ಸಾವಿನ ಶಂಕೆ ಇದೆ. ಅಧಿಕೃತ ದೃಢೀಕರಣ ಇನ್ನೂ ಬಾಕಿಯಿದೆ.
35ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಅವರನ್ನು ಮನೋಹರ್ ಪೊಲೀಸ್ ಠಾಣೆ ಪ್ರದೇಶದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ 11 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸ್ಥಳೀಯರ ಪ್ರಕಾರ, ಶಾಲೆಯ ಕಟ್ಟಡವು ದೀರ್ಘಕಾಲದಿಂದ ಶಿಥಿಲಾವಸ್ಥೆಯಲ್ಲಿದ್ದರೂ ಇಲ್ಲಿ ತರಗತಿಗಳು ನಡೆಯುತ್ತಿದ್ದವು, ಈ ಬಗ್ಗೆ ಆಡಳಿತದ ನಿರ್ಲಕ್ಷ್ಯವಿದೆ ಎಂಬ ಆಕ್ರೋಶ ಕೂಡ ವ್ಯಕ್ತವಾಗಿದೆ.
ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಜಿಲ್ಲಾ ಆಡಳಿತದ ತಂಡ ಶೋಧ ಕಾರ್ಯಾಚರಣೆಯಲ್ಲಿ ನಿರತವಾಗಿದ್ದಾರೆ. ರಕ್ಷಣಾ ಕಾರ್ಯ ಇನ್ನೂ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa