ಲಿಂಗಸುಗೂರು, 29 ಜುಲೈ (ಹಿ.ಸ.) :
ಆ್ಯಂಕರ್ : ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆಗೆ ಆಗಸ್ಟ 6ರಂದು ರಾಯಚೂರು ಜಿಲ್ಲೆಗೆ ಆಗಮಿಸಲಿರುವ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಆಗಿರುವ ಶಾಸಕ ಜೆ.ಟಿ. ಪಾಟೀಲ್ ಅವರು ಹೇಳಿದ್ದಾರೆ.
ಹಟ್ಟಿಯಲ್ಲಿನ ಚಿನ್ನದ ಗಣಿ ಕಂಪನಿಯ ಸಭಾಂಗಣದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಹೊಸ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದ ಬಗ್ಗೆ ಜುಲೈ 29ರಂದು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಜನ ಪ್ರತಿನಿಧಿಗಳು, ಗಣ್ಯರು ಮತ್ತು ಸಾರ್ವಜನಿಕರಿಗೆ ಆಸನ, ಊಟ, ಉಪಹಾರ, ಸಾರಿಗೆ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಆಗಬೇಕು. ಕಾರ್ಯಕ್ರಮಕ್ಕೆ ಆಗಮಿಸಲಿರುವ ಅಂದಾಜು 15,000 ಜನರಿಗೆ ತೊಂದರೆಯಾಗದ ರೀತಿಯಲ್ಲಿ ಊಟದ ಸಿದ್ಧತೆ ಮತ್ತು ಕಾರ್ಯಕ್ರಮಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆಯಾಗಬೇಕು. ಕಾರ್ಯಕ್ರಮದ ಬಗ್ಗೆ ಸರಿಯಾದ ರೀತಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೇಲುಸ್ತುವಾರಿಯಾಗಬೇಕು ಎಂದು ತಿಳಿಸಿದರು.
ಮಾನ್ಯ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಬರುವ ಅರ್ಜಿದಾರರು, ಸಾರ್ವಜನಿಕರು ಮತ್ತು ರೈತ ಕಾರ್ಮಿಕ ಮತ್ತು ಇನ್ನೀತರ ಮುಖಂಡರಿಗೆ ಅನುಕೂಲವಾಗುವಂತೆ ಅರ್ಜಿ ಸಲ್ಲಿಕೆ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಬೇಕು ಎಂದು ತಿಳಿಸಿದರು.
ಲಿಂಗಸುಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್ ಅವರು ಮಾತನಾಡಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡು ಕೂಡಲೇ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಜನತೆಗೆ ಅನುಕೂಲವಾಗುವಂತೆ ಕುಡಿಯುವ ನೀರು ಮತ್ತು ಸರಿಯಾದ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಮಾತನಾಡಿ, ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮವು ಯಾವುದೇ ರೀತಿಯಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗದAತೆ ನಡೆಯಲು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧಿಕಾರಿಗಳು ಎಲ್ಲಾ ರೀತಿಯ ಅಗತ್ಯ ಕ್ರಮವಹಿಸಬೇಕು. ಇದಕ್ಕೆ ಸಹಾಯಬೇಕಿದ್ದರೆ ಸಮಿತಿಗಳಿಗೆ ಇಲಾಖೆಗಳ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಗತ, ಆಸನದಲ್ಲಿ ಶಿಷ್ಟಾಚಾರ ಪಾಲನೆ, ಸನ್ಮಾನ, ಸ್ಮರಣಿಕೆ ವಿತರಣೆ ಸೇರಿದಂತೆ ಇನ್ನೀತರ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಬೇಕು. ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಊಟ, ಉಪಹಾರ ಮತ್ತು ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸ್ಥಳ ಪರಿಶೀಲನೆ: ಸಭೆ ಬಳಿಕ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕ ಜಿ.ಟಿ. ಪಾಟೀಲ್ ಕಂಪನಿಯ ಆವರಣದಲ್ಲಿ ಸಂಚರಿಸಿ ಮುಖ್ಯ ವೇದಿಕೆಯ ಸ್ಥಳದ ವೀಕ್ಷಣೆ ಮಾಡಿದರು. ಬಳಿಕ ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿರುವ ಹೆಲಿಪ್ಯಾಡ್ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿ ಸೂಕ್ತ ಭದ್ರತೆಯೊಂದಿಗೆ ಹೆಲಿಪ್ಯಾಡ್ ನಿರ್ಮಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಶರಣಗೌಡ ಬಯ್ಯಾಪುರ, ಮುಖಂಡರಾದ ಡಿ.ಎಸ್.ಹೂಲಗೇರಿ, ಕಂಪನಿಯ ಎಂ.ಡಿ. ಆರ್.ಶಿಲ್ಪಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್