ವಿಜಯಪುರ, 29 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಅವರು ಆಗಸ್ಟ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಯ ಸಮಗ್ರ ಪೂರಕ ಮಾಹಿತಿಯೊಂದಿಗೆ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಆಗಸ್ಟ್ 8 ರಿಂದ 11ರವರೆಗೆ ಪ್ರವಾಸ ಕೈಗೊಂಡು ಅಧಿಕಾರಿಗಳೊಂದಿಗೆ ಸಭೆ, ಕಚೇರಿ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಸಡೆಸಲಿದ್ದು, ಲೋಕಾಯುಕ್ತರ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಡತ ವಿಲೇವಾರಿ ಹಾಗೂ ಬಾಕಿ ಇರುವ ಪ್ರಕರಣಗಳ ಸಮಗ್ರ ಮಾಹಿತಿಯೊಂದಿಗೆ ಉಪಸ್ಥಿತರಿರಬೇಕು ಎಂದು ಸೂಚಿಸಿದರು.
ಎಲ್ಲ ಕಚೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ದಿನಚರಿ ವಹಿ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಕ್ಷೇತ್ರ ಭೇಟಿ ಹೊರತಾಗಿ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕಗೊಳಿಸಿ, ಅರ್ಹರಿಗೆ ಸರ್ಕಾರದ ಯೋಜನೆಗಳು ತಲುಪಿಸುವಲ್ಲಿ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ,ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande