ರಾಯಚೂರು, 29 ಜುಲೈ (ಹಿ.ಸ.) :
ಆ್ಯಂಕರ್ : ರಾಯಚೂರು ನಗರದ ಆಸ್ತಿಗಳ ಇ-ಖಾತ ಪಡೆಯುವಲ್ಲಿ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ ಅವರನ್ನು ಭೇಟಿಯಾದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಭೇಟಿ ಮಾಡಿ ಇ-ಖಾತದಲ್ಲಿ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.
ರಾಯಚೂರು ನಗರದಲ್ಲಿ ಆಸ್ತಿಗಳಿಗೆ ಮಾಲೀಕರು ಇ-ಆಸ್ತಿ ಪಡೆಯುವ ನಿಟ್ಟಿನಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇ-ಆಸ್ತಿ ಪಡೆಯುವ ಸಂಧರ್ಭದಲ್ಲಿ ರಾಯಚೂರು ಕೋಟೆ, ಕಿಲಾ, ಆಮ್ ತಲಾಬ್ ಹೀಗೆ ಬೇರೆ ಬೇರೆ ಹೆಸರುಗಳು ಕಂಡುಬರುತ್ತಿವೆ. ಇದರಿಂದ ರಾಯಚೂರು ನಗರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆಸ್ತಿ ಬಗ್ಗೆ ಪ್ರಮಾಣ ಪತ್ರವನ್ನು ಪಡೆಯುವಲ್ಲಿ ಇಂತಹ ಸಮಸ್ಯೆಗಳು ಎದುರಾಗಿದ್ದು, ಈ ಸಮಸ್ಯೆಗೆ ಪರಿಹಾರ ಒದಗಿಸುವುದು ಬಹಳ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುವಂತೆ ಹಾಗೆಯೇ ಸಮಸ್ಯೆ ಪರಿಹಾರಕ್ಕೆ ರಾಯಚೂರು ಜಿಲ್ಲಾಧಿಕಾರಿಗಳು, ರಾಯಚೂರು ಮಹಾನಗರ ಪಾಲಿಕೆ ಮಹಾಪೌರರು ಹಾಗೂ ಆಯುಕ್ತರೊಂದಿಗೆ ಸಭೆ ಆಯೋಜಿಸುವಂತೆ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್ ಅವರಿಗೆ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿದರು. ವರದಿಯ ನಂತರ ಸಭೆ ಆಯೋಜಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.
ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕಟಾರಿಯಾ, ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್