ಬೆಂಗಳೂರು, 30 ಜುಲೈ (ಹಿ.ಸ.) :
ಆ್ಯಂಕರ್ : ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ತೀರ್ಪು ಮುಂದೂಡಲ್ಪಟ್ಟಿದೆ. ಮೈಸೂರಿನ ಕೆಆರ್ ನಗರದ ಮಹಿಳೆ ವಿರುದ್ಧ ನಡೆದ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 1ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು “ಕೆಲವು ಸ್ಪಷ್ಟೀಕರಣಗಳು ಅಗತ್ಯವಿರುವ ಕಾರಣದಿಂದಾಗಿ ಇಂದು ತೀರ್ಪು ಪ್ರಕಟಿಸಲಾಗುತ್ತಿಲ್ಲ” ಎಂದು ತಿಳಿಸಿದರು.
2024ರ ಮೇ 31ರಂದು ಬಂಧನಕ್ಕೆ ಒಳಗಾದ ಪ್ರಜ್ವಲ್ ರೇವಣ್ಣ, ಮೈಸೂರಿನ ಕೆಆರ್ ನಗರ ನಿವಾಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಆರೋಪದಂತೆ, ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 9 ಮಂದಿ ಆರೋಪಿಗಳಿದ್ದಾರೆ, ಅವರಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ಸೇರಿ ಕೆಲವರಿಗೆ ಈಗಾಗಲೇ ಜಾಮೀನು ದೊರೆತಿದೆ.
ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa