ಬೆಂಗಳೂರು, 30 ಜುಲೈ (ಹಿ.ಸ.) :
ಆ್ಯಂಕರ್ : ಭಾರತದ ದೇಶದ ಮೊದಲ ಕ್ವಾಂಟಮ್ ಸಮ್ಮೇಳನ ಕ್ವಾಂಟಮ್ ಇಂಡಿಯಾ ಬೆಂಗಳೂರು - 2025 ಕ್ಕೆ ಬೆಂಗಳೂರು ಸಜ್ಜುಗೊಂಡಿದೆ. ಅತ್ಯಾಧುನಿಕ ತಂತ್ರಜ್ಞಾನವೆಂದೇ ಬಿಂಬಿಸಲಾಗಿರುವ ಕ್ವಾಂಟಮ್ ತಂತ್ರಜ್ಞಾನವನ್ನು ಇಡೀ ದೇಶಕ್ಕೆ ಪರಿಚಯಿಸುವ ಹಾಗೂ ಅದನ್ನು ಅಳವಡಿಸಿಕೊಳ್ಳಲು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಜ್ಜಾಗಿದೆ. ಇದರ ಅಂಗವಾಗಿ ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಕಲ ಸಿದ್ದತೆ ಪೂರ್ಣಗೊಂಡಿದೆ.
ಈಗಾಗಲೇ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಈ ಕುರಿತಂತೆ ಹಲವಾರು ಪೂರ್ವಭಾವಿ ಸಭೆಗಳನ್ನು ನಡೆಸಿ, ಸರ್ಕಾರ ಕ್ವಾಂಟಮ್ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸಲು ಖಾಸಗಿ ತಂತ್ರಜ್ಞಾನ ಸಂಸ್ಥೆಗಳು, ಸ್ಟಾರ್ಟ್‌ಅಪ್ ಮತ್ತು ಹಲವಾರು ತಾಂತ್ರಿಕ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಎರಡು ದಿನಗಳ ಕಾಲ ನಡೆಯಲಿರುವ ಈ ಕ್ವಾಂಟಮ್ ಸಮ್ಮೇಳನದ ಮುಖಾಂತರ ವಿಶ್ವಕ್ಕೆ ಈ ತಂತ್ರಜ್ಞಾನವನ್ನು ಪರಿಚಯಿಸುವ ಸಮ್ಮೇಳನ ಮಾಡಲು ಮುಂದಾಗಿದ್ದಾರೆ.
ವಿಶ್ವದ 8 ರಾಷ್ಟ್ರಗಳ ಕ್ವಾಂಟಮ್ ತಂತ್ರಜ್ಞರು ಸೇರಿದಂತೆ ದೇಶದ 1000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿರುವ ಈ ಮಹತ್ವಪೂರ್ಣ ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ಸಮ್ಮೇಳನವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಗಳಾದ ಡಿ.ಕೆ ಶಿವಕುಮಾರ್ ಕರ್ನಾಟಕ ಕ್ವಾಂಟಮ್ ರೋಡ್ ಮ್ಯಾಪ್ ಬಿಡುಗಡೆ ಮಾಡಲಿದ್ದಾರೆ.
ಈ ವಿನೂತನ ತಾಂತ್ರಿಕ ಸಮ್ಮೇಳನದಲ್ಲಿ ರಾಜ್ಯದ ಸಚಿವರಾದ ಐಟಿ&ಬಿಟಿ ಸಚಿವ ಪ್ರಿಯಾಂಕ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ. ಸಿ ಸುಧಾಕರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಕೆಸ್ಟೆಪ್ಸ್‌ನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ವಿನೂತನ ತಂತ್ರಜ್ಞಾನವಾದ ಕ್ವಾಂಟಮ್ ನ್ನ ಸ್ವದೇಶಿಯವಾಗಿ ಅಭಿವೃದ್ದಿಪಡಿಸುವುದು ಇಲಾಖೆಯ ಸಚಿವರಾದ ಎನ್ ಎಸ್ ಭೋಸರಾಜು ಅವರ ಮುಖ್ಯ ಉದ್ದೇಶವಾಗಿದೆ. ಯಾವುದೇ ವಿದೇಶೀ ಖಾಸಗಿ ಸಂಸ್ಥೆಗಳ ಮೇಲೆ ಅವಲಂಬಿತರಾಗದೇ, ಸ್ವಾಲಂಬಿತರಾಗಿ ಈ ತಂತ್ರಜ್ಞಾನ ಅಭಿವೃದ್ದಿಪಡಿಸಿ ದೇಶದ ಸರ್ಕಾರಿ ಮತ್ತು ಖಾಸಗಿ ವಲಯಗಳ ಮೂಲಕ ಸೇವಾ, ಆರೋಗ್ಯ, ಶಿಕ್ಷಣ, ಮೂಲಭೂತ ಸೌಲಭ್ಯ ಮುಂತಾದ ಸಾರ್ವಜನಿಕ್ ಕ್ಷೇತ್ರಗಳಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa