ಬಳ್ಳಾರಿ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಬುಡಕಟ್ಟು ಸಮುದಾಯಗಳನ್ನು ತಲುಪಿಸಿ ಅವರನ್ನು ಸಬಲೀಕರಣಗೊಳಿಸಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರಿಗೆ ಮಂಗಳವಾರ ಆಯೋಜಿಸಿದ್ದ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ “ಆದಿ ಕರ್ಮಯೋಗಿ ಅಭಿಯಾನ” ಎಂಬ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬುಡಕಟ್ಟು ಪ್ರದೇಶದಲ್ಲಿ ಕೆಲಸ ನಿರ್ವಹಿಸುವ ಜನರಿಗೆ ತ್ವರಿತಗತಿಯಲ್ಲಿ ಅವರ ಬೇಡಿಕೆಗಳಿಗೆ ಸ್ಪಂದಿಸಿ, ಉತ್ತಮ ಆಡಳಿತ ನೀಡಬೇಕು. ಇದರಿಂದ ಸಮಾಜ ಪರಿವರ್ತನೆಯ ಜತೆಗೆ ದೇಶದ ಅಭಿವೃದ್ಧಿ ಸಹ ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಬುಡಕಟ್ಟು ಸಮಾಜಕ್ಕೆ ಯೋಜನೆಗಳನ್ನು ತಲುಪಿಸುವುದು ಮತ್ತು ಜನರ ಕೌಶಲ್ಯಗಳನ್ನು ಉತ್ತೇಜಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು ಅವರು ಪ್ರಾಸ್ತವಿಕವಾಗಿ ಮಾತನಾಡಿ, ಪರಿಶಿಷ್ಟ ವರ್ಗದ ಜನರ ಶ್ರೇಯೋಭಿವೃದ್ಧಿ ಮಾಡುವುದು ಈ ಆದಿ ಕರ್ಮಯೋಗಿ ಅಭಿಯಾಮದ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಾಗಿರುವ ಬಳ್ಳಾರಿ ತಾಲ್ಲೂಕಿನ 10 ಗ್ರಾಮಗಳು, ಕಂಪ್ಲಿ ತಾಲ್ಲೂಕಿನ 21 ಗ್ರಾಮಗಳು, ಕುರುಗೋಡು ತಾಲ್ಲೂಕಿನ 03 ಗ್ರಾಮಗಳು, ಸಂಡೂರು ತಾಲ್ಲೂಕಿನ 20 ಗ್ರಾಮಗಳು, ಸಿರುಗುಪ್ಪ ತಾಲ್ಲೂಕಿನ 05 ಗ್ರಾಮಗಳ ಸೇರಿ ಒಟ್ಟು 59 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ಈಗಾಗಲೇ ಜನಭಾಗೀಧಾರಿ ಕಾರ್ಯಕ್ರಮ ಯೋಜನೆಯ ಬಗ್ಗೆ ಪ್ರಚಾರ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ವಿಭಾಗದ ಉಪ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇಲಾಖೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್