ಜೌನ್‌ಪುರ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯ ಖೇತಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಗುರಾನಿ ಬಜಾರ್ ಬಳಿ ತಡರಾತ್ರಿ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐದು ಮಂದಿ ಮೃತಪಟ್ಟಿದ್ದು , ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಧಿಕಾರಿ ಡಾ. ದಿನೇಶ್ ಸಿಂಗ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೌಸ್ತುಭ್ ಆಸ್ಪತ್ರೆಗೆ ಧಾವಿಸಿ ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು ಮತ್ತು ವೈದ್ಯರಿಗೆ ಸಮರ್ಪಕ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ವಾರಣಾಸಿಯಿಂದ ಶಹಗಂಜ್ ಕಡೆಗೆ ಹೋಗುತ್ತಿದ್ದಾಗ ತಪ್ಪು ದಿಕ್ಕಿನಲ್ಲಿ ಚಲಿಸಿ ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳದಲ್ಲೇ ಇಬ್ಬರು ಪುರುಷರು, ಒಬ್ಬ ಮಹಿಳೆ ಮತ್ತು ಮಗು ಮೃತಪಟ್ಟಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು, ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಶಂಕಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa