ಬೆಂಗಳೂರು, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ ತೀರ, ಕೆರೆ ಹಾಗೂ ಸಮುದ್ರ ತೀರಕ್ಕೆ ತೆರಳಬಾರದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಕೆಂಪು ಎಚ್ಚರಿಕೆ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಎತ್ತರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಹೊರತುಪಡಿಸಿ 11 ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಗೆ ಕಿತ್ತಳೆ ಎಚ್ವರಿಕೆ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲೆ ಭಾರಿ ಮಳೆಯಾಗುತ್ತಿದ್ದು ಕೆಂಪು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನ ರಜೆ ನೀಡಲಾಗಿದ್ದು, ಈ ಕೊರತೆಯನ್ನು ಆಗಸ್ಟ್ 23ರಂದು ಶನಿವಾರ ಪೂರೈಸುವಂತೆ ಆದೇಶಿಸಲಾಗಿದೆ.
ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ-ತೀರ, ಸಮುದ್ರ ತೀರ ಹಾಗೂ ಭೂಕುಸಿತ ಸಂಭವಿಸುವ ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ. ಅನಗತ್ಯ ಪ್ರವಾಸ ಕೈಗೊಳ್ಳದೆ ಸಾರ್ವಜನಿಕರು ಜಾಗೃತಿ ವಹಿಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa