ಚಿತ್ರದುರ್ಗ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ನೀಡಲು ತಾಲ್ಲೂಕು ಮಟ್ಟದಲ್ಲಿ ಏಕ ಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ತಹಶೀಲ್ದಾರರ ನೇತೃತ್ವದ ಸಮಿತಿಯಲ್ಲಿ ಪೌರಾಯುಕ್ತರು, ಪೊಲೀಸ್, ಪರಿಸರ, ಸಾರಿಗೆ, ಆರೋಗ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸಾರ್ವಜನಿಕ ಸ್ಥಳ, ರಸ್ತೆ ಹಾಗೂ ಸಂಚಾರಕ್ಕೆ ಅಡಚಣೆ ಉಂಟಾಗುವ ಸ್ಥಳಗಳಲ್ಲಿ ಅನುಮತಿ ನೀಡಲಾಗುವುದಿಲ್ಲ. ಡಿಜೆ ನಿಷೇಧಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ತಯಾರಿ, ಮಾರಾಟ ಮತ್ತು ವಿಸರ್ಜನೆ ನಿಷೇಧವಾಗಿದೆ. ಮಣ್ಣಿನ ಮೂರ್ತಿಗಳ ಪ್ರತಿಷ್ಠಾಪನೆಗೆ ಪ್ರೋತ್ಸಾಹ ನೀಡಲಾಗಿದ್ದು, ನಿರ್ದಿಷ್ಟ ಜಲಮೂಲಗಳಲ್ಲಿ ಮಾತ್ರ ವಿಸರ್ಜನೆಗೆ ಅವಕಾಶ. ಹೂವು, ಹಣ್ಣು, ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.
ತಾಲ್ಲೂಕು ಸಮಿತಿಗಳು ತಕ್ಷಣ ಸಭೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa