ಬಳ್ಳಾರಿ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವು ಆ.23 ರಿಂದ ಪ್ರಾರಂಭಗೊಂಡಿದ್ದು, ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್.ನಾಯ್ಕ ಅವರು ಹೇಳಿದ್ದಾರೆ.
ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ ಎಂದರು.
ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ ಎಂದು ಹೇಳಿದರು.
ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಎರಡನೇಯ ಹಂತದ ಸಮೀಕ್ಷೆಯನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ ಎಂದರು.
ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ 'ದತ್ತಾಂಶಗಳನ್ನು ಸೆರೆಹಿಡಿಯುವುದು' ಮಾತ್ರವಲ್ಲದೆ, ಅಂದಾಜು 7 ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್