ಲಕ್ನೋ, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಭಕ್ತರು ದುರ್ಮರಣ ಹೊಂದಿದ್ದಾರೆ.
ಮೃತಪಟ್ಟವರಲ್ಲಿ ಒಂದು ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್–ಟ್ರಾಲಿಗೆ ಕಂಟೇನರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ 10 ಮಂದಿಯನ್ನು ಅಲಿಘರ್ ಹೈಯರ್ ಸೆಂಟರ್‌ಗೆ ಸ್ಥಳಾಂತರಿಸಲಾಗಿದೆ. 10 ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ಹಾಗೂ 23 ಮಂದಿಯನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕಾಸ್ಗಂಜ್‌ನಿಂದ ರಾಜಸ್ಥಾನದ ಗೋಗಾಜಿ ದೇವಾಲಯಕ್ಕೆ ತೆರಳುತ್ತಿದ್ದ ಭಕ್ತರ ವಾಹನಕ್ಕೆ ಅರ್ನಿಯಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 34 ರ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ದುರ್ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿ, ಗಾಯಾಳುಗಳಿಗೆ ತಕ್ಷಣ ಸಮರ್ಪಕ ಚಿಕಿತ್ಸೆಯನ್ನು ಒದಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa