ರಾಯಚೂರು, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ರಾಯಚೂರ ಜಿಲ್ಲೆಯಲ್ಲಿ ಕೈಗೊಂಡ ಪ್ರವಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಬೇಕು. ಆಯಾ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ರಾಯಚೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಎಸ್ ಚಿಟಗುಬ್ಬಿ ಅವರು ಹೇಳಿದರು.
ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿನ ರಜತ್ ಮಹೋತ್ಸವದ ಸಭಾಂಗಣದಲ್ಲಿ ಆಗಸ್ಟ್ 26ರಂದು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಆಗಸ್ಟ್ 28ರಂದು ರಾಯಚೂರ ನಗರಕ್ಕೆ ಆಗಮಿಸಿ ಮೂರು ದಿನಗಳ ಕಾಲ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು. ಉಪ ಲೋಕಾಯುಕ್ತರು ಆಗಸ್ಟ್ 28ರಂದು ಅನಿರೀಕ್ಷಿತ ಭೇಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಆಗಸ್ಟ್ 29 ಮತ್ತು ಆಗಸ್ಟ್ 30ರಂದು ಭೇಟಿ ಮತ್ತು ವೇದಿಕೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಆಗಸ್ಟ್ 29ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ಗಂಟೆವರೆಗೆ ಮತ್ತು ಮಧ್ಯಾಹ್ನ ಊಟದ ವಿರಾಮದ ನಂತರ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು. ಸಂಜೆ 5.30ರಿಂದ 6.30ರವರೆಗೆ ಕೃಷಿ ವಿವಿಯ ಬಸವೇಶ್ವರ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ ನಡೆಯಲಿದೆ. ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಉಪನೋಂದಣಿ ಕಚೇರಿ, ಆರ್‌ಟಿಓ ಕಚೇರಿ ಸೇರಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜನೆಯಾಗಿದೆ. ಸಾರ್ವಜನಿಕರ ಅಹವಾಲುಗಳ ಸ್ವೀಕಾರ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಕುಡಿಯುವ ನೀರು, ಊಟದ ವ್ಯವಸ್ಥೆಯಾಗಬೇಕು ಎಂದು ಸೂಚನೆ ನೀಡಿದರು.
ಆಗಸ್ಟ್ 30ರಂದು ಬೆಳಿಗ್ಗೆ 11ರಿಂದ 1.45 ಗಂಟೆವರೆಗೆ ಕೃಷಿ ವಿವಿಯ ಬಸವೇಶ್ವರ ಸಭಾಂಗಣದಲ್ಲಿ, ಹಿಂದಿನ ದಿನ ಅಂದರೆ ಆಗಸ್ಟ್ 29ರಂದು ಸಾರ್ವಜನಿಕರು ವ್ಯಕ್ತಪಡಿಸಿ ಬಾಕಿ ಇರುವ ದೂರುಗಳು ಮತ್ತು ಕುಂದುಕೊರತೆಗಳ ಬಗ್ಗೆ ದೂರುದಾರರು ಹಾಗೂ ಪ್ರತಿವಾದಿಗಳ ಸಮ್ಮುಖದಲ್ಲಿ ಉಪ ಲೋಕಾಯುಕ್ತರು ರಾಯಚೂರಿಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ನಡೆಸುವರು ಎಂದು ತಿಳಿಸಿದರು.
ಇದೆ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಮಾತನಾಡಿ, ಉಪಲೋಕಾಯುಕ್ತರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ನಡೆಸಿ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದೆ. ಅದರಂತೆ ಪ್ರತಿಯೊಂದು ಸಮಿತಿಯಲ್ಲಿನ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ ರಾಯಚೂರು ಜಿಲ್ಲೆಗೆ ಸಂಬಂಧಿಸಿದ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳ ಬಗ್ಗೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಉಪಲೋಕಾಯುಕ್ತರು ವಿಚಾರಣೆ ನಡೆಸಲಿದ್ದು, ಆಯಾ ಇಲಾಖೆಯ ಅಧಿಕಾರಿಗಳು, ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳ ಬಗ್ಗೆ ವಿಶೇಷ ಗಮನ ಹರಿಸಿ ವಿಚಾರಣೆಗೆ ಹಾಜರಾಗಬೇಕು ಎಂದು ಸಭೆಯ ಮೂಲಕ ಸೂಚನೆ ನೀಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಲೋಕಾಯುಕ್ತ ಡಿಎಸ್ಪಿ ವಸಂತಕುಮಾರ, ಲೋಕಾಯುಕ್ತ ಡಿವೈಎಸ್ಪಿ ರವಿ ಪುರುಷೋತ್ತಮ, ತಹಸೀಲ್ದಾರರಾದ ಸುರೇಶ ವರ್ಮಾ, ಅಮರೇಶ ಬಿರಾದಾರ, ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಡಾ.ರೋಣಿ ಪಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್