ಕೊಪ್ಪಳ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸೆಪ್ಟೆಂಬರ್ 7ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಉಪವಿಭಾಗಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಸೆ. 7 ರಂದು ಸರಳವಾಗಿ ಆಚರಿಸಬೇಕೆಂಬ ಸಮುದಾಯಗಳ ಮುಖಂಡರ ಕೋರಿಕೆ ಮೇರೆಗೆ ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಪ್ಪಾರ್ಚನೆ ಮಾಡಿ ಗೌರವಿಸಲಾಗುವುದು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಉಪಸ್ಥಿತರಿರಬೇಕೆಂದು ಹೇಳಿದರು.
ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಸರಕಾರಿ ಕಛೇರಿಗಳಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಆಚರಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ನಡೆಯುವ ಪೂಜಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಮತ್ತು ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪಲತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ್, ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷರಾದ ಕಾಶಿವಿಶ್ವನಾಥ, ತಾಲ್ಲೂಕಾಧ್ಯಕ್ಷ ಈರಣ್ಣ ಹುಲಿಗಿ, ಉಪಾಧ್ಯಕ್ಷ ಎ.ವಿ.ರವಿ, ಮುಖಂಡರಾದ ರಾಜಣ್ಣ ಈಳಿಗೇರ್, ಚಂದ್ರ, ಈಳಿಗೇರ್, ಅನಿಲ್ ಹುಲಿಗಿ, ಮಂಜುನಾಥ ಈಳಿಗೇರ್, ಅರುಣಕುಮಾರ್ ಗಂಗಾವತಿ ಸೇರಿದಂತೆ ಮತ್ತಿತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್