ಬಳ್ಳಾರಿ, 04 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ಸಮರ್ಪಕವಾಗಿ ಯೂರಿಯಾ ಪೂರೈಸುವಲ್ಲಿ ವಿಫಲವಾಗಿದ್ದು ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಬೇಕು ಎಂದು ಜಿಲ್ಲಾ ಜೆಡಿಎಸ್ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನಳ್ಳಿ ಡಿ. ತಾಯಣ್ಣ ಅವರು ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರ ವ್ಯಾಪಕ ಭ್ರಷ್ಟಾಚಾರ, ದುರಾಡಳಿತ ಮತ್ತು ರಾಜಕೀಯ ಪ್ರತೀಕಾರದಲ್ಲಿಯೇ ಆಡಳಿತವನ್ನು ನಡೆಸುತ್ತಿದೆ. ಕರ್ನಾಟಕದಲ್ಲಿ ರೈತರು, ಕಾರ್ಮಿಕರು, ಬಡವರು ಮತ್ತು ದಲಿತರ ಹಿತಾಸಕ್ತಿಯನ್ನು ಸರ್ಕಾರ ಕಡೆಗಣಿಸಿದೆ ಎಂದರು.
ಕರ್ನಾಟಕ ರಾಜ್ಯಾದ್ಯಂತ ಉತ್ತಮವಾದ ಮಳೆ ಸುರಿದಿದೆ. ಬಿತ್ತನೆ ಚಟುವಟಿಕೆಗಳು ವೇಗವಾಗಿ ನಡೆದಿವೆ. ಕಾಳಸಂತೆಯಲ್ಲಿ ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ರೈತರಿಗೆ ಅಗತ್ಯವಿರುವಷ್ಟು ಯೂರಿಯಾ ಪೂರೈಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ. ಕಾರಣ ರಾಜ್ಯಪಾಲರು ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಇಲ್ಲವೇ ಸರ್ಕಾರವನ್ನು ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್