ಬೆಂಗಳೂರು, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಮುಷ್ಕರ ಆರಂಭಿಸಿದ್ದ ಕರ್ನಾಟಕ ಸಾರಿಗೆ ನೌಕರರು ಕರ್ನಾಟಕ ಉಚ್ಚ ನ್ಯಾಯಾಲಯದ ಎಚ್ಚರಿಕೆಗೆ ಬೆದರಿ ಸಾರಿಗೆ ನಿಗಮಗಳ ನೌಕರರ ಜಂಟಿ ಕ್ರಿಯಾ ಸಮಿತಿ ಆರಂಭಿಸಿದ್ದ ಮುಷ್ಕರ ಸ್ಥಗಿತಗೊಳಿಸಿದೆ.
ಈ ಕುರಿತು ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಒಂದು ದಿನ ಮುಷ್ಕರ ಮುಂದೂಡುವಂತೆ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಇಂದು ಮುಷ್ಕರ ಆರಂಭಿಸಿದ್ದರು.
ಇಂದು ನಡೆದ ವಿಚಾರಣೆ ವೇಳೆ ನ್ಯಾಯಾಲಯ ಮುಷ್ಕರ ಆರಂಭಿಸಿರುವ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತು.
ಮುಷ್ಕರ ನಿಲ್ಲಿಸದಿದ್ದರೇ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು. ಎಸ್ಮಾ ಕಾಯ್ದೆಯಡಿ ಸರ್ಕಾರ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು ಎಂದು ಎಚ್ಚರಿಕೆ ನೀಡಿತು. ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರವನ್ನು ಮುಂದೂಡಿದ್ದಾರೆ.
ನಾಳೆಯಿಂದ ಮುಷ್ಕರ ನಡೆಸುವುದಿಲ್ಲ ಎಂಬುದಾಗಿ ಸಾರಿಗೆ ನೌಕರರ ಸಂಘವು ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಬೆಂಗಳೂರಿನ ಜೆ. ಸುನೀಲ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಜೋಷಿ ಅವರಿದ್ದ ನ್ಯಾಯಪೀಠಕ್ಕೆ ರಸ್ತೆ ಸಾರಿಗೆ ನಿಗಮಗಳ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರು ಈ ಮಾಹಿತಿ ನೀಡಿದರು.
ನ್ಯಾಯಾಲಯ ಕಲಾಪ ಪ್ರಾರಂಭವಾಗುತ್ತಿದ್ದಂತೆ ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸಾರಿಗೆ ಎಂಬುದು ಅಗತ್ಯ ಸೇವೆಯಾಗಿದೆ. ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. ಕೈಗಾರಿಕೆ ವಿವಾದ ಕಾಯ್ದೆಯಡಿಯಲ್ಲಿ ಸರ್ಕಾರ ಸಾರಿಗೆ ನಿಗಮಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಲಾಗುತ್ತಿದೆ. ಈ ನಡುವೆ ನ್ಯಾಯಾಲಯ ಸಾರಿಗೆ ಮುಷ್ಕರ ನಡೆಸದಂತೆ ಆದೇಶ ನೀಡಿದೆ. ಆದರೂ, ಮುಷ್ಕರ ಮುಂದುರೆದಿದೆ ಎಂದು ತಿಳಿಸಿದರು.
ಈ ವೇಳೆ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಮುಷ್ಕರ ಸ್ಥಗಿತವಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವಕೀಲರು, ಬೆಂಗಳೂರಿನಲ್ಲಿ ಸಂಚಾರ ಮುಂದುವರೆದಿದೆ. ಕೆಲ ಸಂವಹನ ಕಾರಣದಿಂದಾಗಿ ಜಿಲ್ಲೆಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ನ್ಯಾಯಾಲಯದ ಆದೇಶವಿದ್ದರೂ ಮುಷ್ಕರ ಮುಂದುವರೆಸಿರುವುದು ನ್ಯಾಯಾಂಗ ನಿಂದನೆಯಾಗಿದೆ. ನೌಕರರ ಸಂಘಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿತು.
ಅಲ್ಲದೆ, ಮುಷ್ಕರ ಸ್ಥಗಿತಗೊಳಿಸಿರುವ ಕುರಿತಂತೆ ಬುಧವಾರ ನ್ಯಾಯಪೀಠಕ್ಕೆ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಸಂಘಗಳ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುವುದಕ್ಕೆ ಅದೇಶ ನೀಡಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ಎಂದು ಪೀಠ ಎಚ್ಚರಿಕೆ ನೀಡಿತು.
ಸಾರಿಗೆ ನಿಗಮಗಳ ನೌಕರರ ಯಾವುದೇ ಸಮಸ್ಯೆ ಇದ್ದಲ್ಲಿ ಸರ್ಕಾರದ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಿ. ಅದನ್ನು ಹೊರತುಪಡಿಸಿ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗುವಂತೆ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ಪೀಠ ತರಾಟೆಗೆ ತೆಗೆದುಕೊಂಡಿತು.
ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿಯಲ್ಲಿದ್ದರೂ ಮುಷ್ಕರ ಮುಂದುವರೆಸಲಾಗಿದೆ. ಎಸ್ಮಾ ಕಾಯ್ದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ಮುಷ್ಕರ ನಿಂತಿರುವುದಕ್ಕೆ ಸಂಬಂಧಿಸಿದಂತೆ ಬುಧವಾರ ನ್ಯಾಯಪೀಠಕ್ಕೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa