ವಿಜಯಪುರ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ನಗರದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಕಂದಗಲ್ ರಂಗ ಮಂದಿರಕ್ಕೆ ಆಗಮಿಸಿ, ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿರುವ ನಿಲಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು.
ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಅವರ ಕುರಿತಾಗಿ ವಿಶೇಷ ಉಪನ್ಯಾಸ ನೀಡಲು,ಉಪನ್ಯಾಸಕನೋರ್ವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ಡಿ.ದೇವರಾಜ್ ಅರಸು ಅವರ ಕುರಿತಾಗಿ ಸುಂದರ ರೂಪಕ ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಡಿ ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನೆರವೆರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖಾಧಿಕಾರಿಗಳು ಮಾಡಿಕೊಳ್ಳಬೇಕು.ವೇದಿಕೆ ಅಲಂಕಾರ, ನೀರಿನ ವ್ಯವಸ್ಥೆ, ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿ, ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವೃತ್ತಗಳ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ ಹಾಗೂ ವೃತ್ತಗಳಿಗೆ ದೀಪಾಲಂಕಾರ ಮಾಡುವತ್ತ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ
ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತರಲು ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ ಕುಂಬಾರ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್,ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ ಅಶೋಕ ಗೋಣಸಗಿ,ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ,
ಕಾರ್ಯನಿರ್ವಾಹಕ ಅಭಿಯಂತರರಾದ ಶಾಂತವೀರ ಕೊಳ್ಳಿ,ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ,ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ್.ಕೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ಅಡಿವೆಪ್ಪ ಸಾಲಗಲ್, ವಿದ್ಯಾವತಿ ಅಂಕಲಗಿ,ಮಲ್ಲು ಬಿದರಿ,ಸಿದ್ದು ರಾಯಣ್ಣ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande