ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ : ಸಚಿವ ಪಾಟೀಲ
ವಿಜಯಪುರ, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವ
ಸಮಾರಂಭ


ವಿಜಯಪುರ, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.

ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಜಿಲ್ಲಾಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ನಡೆಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಕೃಷಿ ಬೆಳೆಗಳು, ತೋಟಗಾರಿಕೆ ಬೆಳೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ಪಿಡಿಓ ಸೇರಿದಂತೆ ತಮ್ಮ ಅಧೀನದ ಅಧಿಕಾರಿಗಳಿಂದ ಕೂಡಲೇ ಮಾಹಿತಿ ಪಡೆದು, ನಿಯಮಾನುಸಾರ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಸಮರ್ಪಕವಾಗಿ ಸಮೀಕ್ಷೆ ನಡೆಸಿ ನಿಗದಿತ ಅವಧಿಯಲ್ಲಿ ವಿಳಂಬ ಮಾಡದೇ ಪರಿಹಾರ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸದೇ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ : ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಳೆ ಬಂದ ಸಂದರ್ಭದಲ್ಲಿ ಕಾಮಗಾರಿಗಳನ್ನು ಕೈಗೊಳ್ಳದೇ ಮುಂಚಿತವಾಗಿ ಪ್ರವಾಹಕ್ಕೊಳಗಾಗುವ ಪ್ರದೇಶಗಳನ್ನು ಗುರುತಿಸಿಕೊಂಡು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು.ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಿ ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು 11 ಕಿ.ಮೀ. ಕೋಟೆಗೋಡೆ ಕಂದಕ ಸಂಪೂರ್ಣ ಸರ್ವೇ ಮಾಡಿಸಿ ಈಗಾಗಲೇ ಮಾರ್ಕ್ ಮಾಡಿಸಲಾಗಿದೆ. ಮನಗೂಳಿ ಅಗಸಿಯಿಂದ ಸಿಂದಗಿ ರೇಲ್ವೆ ಸ್ಟೇಶನ್‍ವರೆಗೆ ಕೋಟೆಗೋಡೆ ಕಂದಕ ಹೂಳು ತೆಗೆಯುವುದು ಮತ್ತು ಸಮತಟ್ಟುಗೊಳಿಸಿ ನೀರನ್ನು ಸಂಪೂರ್ಣವಾಗಿ ಹೊರ ಹಾಕಲು ಈಗಾಗಲೇ ಯೋಜನೆ ರೂಪಿಸಿ ಚಾಲನೆ ನೀಡಲಾಗಿದ್ದು, ಈ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಮತ್ತೊಮ್ಮೆ ಪ್ರವಾಹ ಪರಿಸ್ತಿತಿ ಉಂಟಾಗದಂತೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ನಗರದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಪಾಲಿಕೆ ವ್ಯಾಪ್ತಿಯಲ್ಲಿನ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕ್ಷೀಪ್ರಗತಿಯಲ್ಲಿ ಪೂರ್ಣಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕೋಟೆಗೋಡೆ ಸ್ವಚ್ಛತೆ, ಹೂಳು ತೆಗೆಯುವುದು, ಕಂಟಿ-ಮುಳ್ಳುಗಳನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ ಅವರು,ನಗರದ ಕೆ.ಸಿ.ನಗರ, ಗಚ್ಚಿನಕಟ್ಟಿ ಕಾಲನಿ ವಾರ್ಡ ನಂ.10ರಲ್ಲಿ ಮಳೆ ನೀರು ಚರಂಡಿ ನಿರ್ಮಿಸುವ ಕಾಮಗಾರಿಯನ್ನು ಕೈಗೊಂಡು ಈ ಭಾಗದಲ್ಲಿ ಪ್ರವಾಹ ನಿಯಂತ್ರಣಕ್ಕೆ ಕ್ರಮ ವಹಿಸಬೇಕು.ವಾರ್ಡ ನಂ.24ರ ಬಾಗಾಯತ್ ಗಲ್ಲಿಯಲ್ಲಿ ಅತಿಕ್ರಮಣ ತೆರವುಗೊಳಿಸಿ ಮಳೆ ಚರಂಡಿ ನಿರ್ಮಿಸುವ ಮೂಲಕ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸ್ಥಳಗಳ ಕುರಿತು ಸಂಬಂಧಿಸಿದವರೊಂದಿಗೆ ಮಂಗಳವಾರ ಸಭೆ ನಡೆಸಿ ಸಮಸ್ಯೆಗಳ ನಿವಾರಣೆಗೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಅವರು ಸೂಚನೆ ನೀಡಿದರು.

ರಾಮನಗರದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಕೈಗೊಳ್ಳಲು ಒಂದು ಕೋಟಿ ರೂ. ಅವಶ್ಯಕತೆ ಇದ್ದು, ಮಹಾನಗರ ಪಾಲಿಕೆಯಿಂದ ತುರ್ತು ಅನುದಾನವನ್ನು ಬಳಸಿಕೊಂಡು ಕೂಡಲೇ ಅಗತ್ಯ ಕಾಮಗಾರಿ ಕೈಗೊಂಡು ರಾಮನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಇಬ್ರಾಹಿಂ ರೋಜಾ ಹತ್ತಿರ ಕೋಟೆಗೋಡೆ ಪ್ರದೇಶದಲ್ಲಿ ಅತಿಕ್ರಮಣ ಮಾಡಿರುವುದರಿಂದ ಮಳೆ ನೀರು ಸರಾಗವಾಗಿ ಹರಿದುಹೋಗಲು ಜಾಗವಿಲ್ಲದೇ ನೀರು ನಿಂತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅತಿಕ್ರಮಣ ತೆರವುಗೊಳಿಸದಂತೆ ಕೆಲವರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ನ್ಯಾಯಾಲಯದ ಆದೇಶ ಬರುವರೆಗೆ ಕಾಯ್ದು ಕುಳಿತುಕೊಳ್ಳದೇ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ವಹಿಸಿ, ಅತಿಕ್ರಮಣ ಮಾಡಿಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಅಗತ್ಯ ಕಾಮಗಾರಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಶಾಲೆ- ಅಂಗನವಾಡಿಯ ಶಿಥಿಲಾವ್ಯವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಕೈಗೊಂಡು ಪಾಠ ಬೋಧನೆ ಮಾಡಬೇಕು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಯಾವುದೇ ಅವಘಢಗಳು ಸಂಭವಿಸದಂತೆ ನಿಗಾ ವಹಿಸಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮಕ್ಕಳ ಪಾಲಕರು, ಶಾಲೆ ಮುಖ್ಯೋಪಾಧ್ಯಯರು ಸಭೆ ನಡೆಸಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಲಮಟ್ಟಿ ಜಲಾಶಯಲ್ಲಿ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದಿಂದ ನೀರು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕೆರೆಗಳನ್ನು ತುಂಬಿಸಲು ಈ ನೀರನ್ನು ಬಳಸಿಕೊಂಡು ಕೆರೆ ತುಂಬಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ಒಟ್ಟಾರೆ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ ಆನಂದ ಕೆ. ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕೈಗೊಂಡಿರುವ ಕಾಮಗಾರಿಗಳ ಮಾಹಿತಿ ನೀಡಿದರು. ಪ್ರವಾಹ ನಿಯಂತ್ರಣಕ್ಕಾಗಿ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಕುರಿತು, ರಕ್ಷಣಾ ಸಾಮಗ್ರಿಗಳಾದ ಬೋಟ್, ರೋಪ್ಸ್, ಲೈಫ್ ಜಾಕೆಟ್, ಟಾರ್ಚ ಸೇರಿದಂತೆ ಇತ್ಯಾದಿ ಸಾಮಗ್ರಿಗಳನ್ನು ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಾಲೂಕಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಕಾಲ-ಕಾಲಕ್ಕೆ ಅವರಿಂದ ವರದಿ ಪಡೆದುಕೊಡು ಅಗತ್ಯ ಕ್ರಮ ವಹಿಸಲಾಗುತ್ತಿದೆ ಹೇಳಿದರು.

ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande