ಬಳ್ಳಾರಿ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಇರುವ ಶೇ. 15 ಎನ್‍ಆರ್‍ಐ ಕೋಟಾವನ್ನು ತಕ್ಷಣವೇ ರದ್ದು ಮಾಡಲು ಆಗ್ರಹಿಸಿ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಡಿಸಿ ಕಚೇರಿಯ ಎದುರು ಬುಧವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆಯ ರಾಜ್ಯ ಮಾಜಿ ಅಧ್ಯಕ್ಷ ಡಾ. ಎನ್. ಪ್ರಮೋದ್ ಅವರು ಪ್ರತಿಭಟನೆಯ ನೇತೃತ್ವವಹಿಸಿ, 2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ. 15 ರಷ್ಟು ಎನ್‍ಆರ್‍ಐ ಕೋಟಾವನ್ನು ಮೀಸಲು ಮಾಡಿರುವುದು ಅವೈಜ್ಞಾನಿಕ. ಈ ಮೀಸಲಿನಿಂದಾಗಿ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯರಾಗುವ ಕನಸಿಗೆ ಧಕ್ಕೆ ಆಗಲಿದೆ. ಕಾರಣ ಸರ್ಕಾರ ತಕ್ಷಣವೇ ಈ ಮೀಸಲನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು, ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇವೆ. ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡದೇ - ಮೂಲಭೂತ ಸೌಕರ್ಯಗಳನ್ನು ನೀಡದೇ ಎನ್‍ಆರ್‍ಐ ಮೀಸಲು ನೀಡುತ್ತಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ ಎಂದು ಟೀಕಿಸಿದರು. ಜಿಲ್ಲಾ ಅಧ್ಯಕ್ಷರು ಕೆ. ಈರಣ್ಣ, ಉಪಾಧ್ಯಕ್ಷೆ ಶಾಂತಿ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್