ಕೊಪ್ಪಳ, 11 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿರುವ ಮಾಜಿ ದೇವದಾಸಿ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ಹೊರ ಉಳಿಯದಂತೆ ಸರಿಯಾಗಿ ಹಾಗೂ ನಿಖರವಾದ ಮಾಹಿತಿ ಸಂಗ್ರಹಿಸಿ, ಮಾಜಿ ದೇವದಾಸಿ ಮಹಿಳೆಯರ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ಕಛೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊಪ್ಪಳದಲ್ಲಿನ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ಸೆಪ್ಟೆಂಬರ್ 15 ರಿಂದ 45 ದಿನಗಳ ಅವಧಿಯಲ್ಲಿ ಮಾಡಲಾಗುವುದು. ಅದರ ಜೊತೆಗೆ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆ. 15 ರಿಂದ ನಡೆಯಲಿದೆ. ಈ ಸಮೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. 1993-94 ಮತ್ತು 2007-08 ರಲ್ಲಿ ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ನಡೆಸಿದ್ದು, ಆ ಸಮೀಕ್ಷೆಯಲ್ಲಿ ಮಾಜಿ ದೇವದಾಸಿ ಮಹಿಳೆಯರು ಕೈಬಿಟ್ಟು ಹೋಗಿದ್ದಲ್ಲಿ ಈಗ ನಡೆಯುವ ಮರು ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಬೇಕು ಎಂದರು.
ಹಿಂದಿನ ಸಮೀಕ್ಷೆಯಲ್ಲಿ ಕೈಬಿಟ್ಟ ಮಾಜಿ ದೇವದಾಸಿ ಮಹಿಳೆಯರು ಮರು ಸಮಿಕ್ಷೆಯಲ್ಲಿ ಸೇರ್ಪಡೆಯಾಗಬೇಕು ಮತ್ತು ಮರಣ ಹೊಂದಿದ ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರು ತಾವು ಈ ಸಮೀಕ್ಷೆಯಲ್ಲಿ ಸೇರ್ಪಡೆಯಾಗಲು ಇಚ್ಚಿಸಿದರೆ ನಿಖರ ಮಾಹಿತಿಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಕಛೇರಿಗೆ ನೀಡಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಕೊಪ್ಪಳದಲ್ಲಿನ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಸದಸ್ಯರು ತಮ್ಮ ಸ್ಪಷ್ಟ ಮತ್ತು ನಿಖರ ಮಾಹಿತಿಯನ್ನು ತಾಲೂಕಾಸ್ಪತ್ರೆಗಳಲ್ಲಿ ಅಥವಾ ಜಿಲ್ಲಾಸ್ಪತ್ರೆಯಲ್ಲಿ ಭೇಟಿ ನೀಡಿ ಈ ಸಮೀಕ್ಷೆಗೆ ಸಹಕರಿಸಬೇಕು ಎಂದು ಹೇಳಿದರು.
ಈ ಎರಡು ಸಮೀಕ್ಷೆಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೆÇೀಸ್ಟರ್ ಬಿಡುಗಡೆ: ಈ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯ ಪೆÇೀಸ್ಟರ್ ಹಾಗೂ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯ ಪೆÇೀಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೇಪ್ಪನವರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೋಗಲದ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕೊಪ್ಪಳ ಯೋಜನಾಧಿಕಾರಿ ಪೂರ್ಣಿಮಾ ಏಳುಬಾವಿ, ದೇವದಾಸಿ ಮಹಿಳೆಯರ ಮರು ಸಮೀಕ್ಷೆ ರಾಜ್ಯ ಸಮಿತಿ ಸದಸ್ಯರಾದ ಚಂದಾಲಿಂಗಪ್ಪ ಕಲಾಲಬಂಡಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರು ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್