ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ 10 ಅನುಭವಿ ಬೈಕ್ ರೈಡರ್ ಗಳು ಸೆ.14 ರಂದು ಬೆಳಿಗ್ಗೆ 10.30 ಕ್ಕೆ ಬಳ್ಳಾರಿಯಿಂದ ರಾಷ್ಟ್ರಧ್ವಜದೊಂದಿಗೆ ಬೆಂಗಳೂರಿಗೆ ತೆರಳಲಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ.15 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ಬೈಕ್ ರ‍್ಯಾಲಿ ಹಾಗೂ ಸೈಕಲ್ ರ‍್ಯಾಲಿ ಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಎಲ್ಲಾ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಬೈಕ್ ರ‍್ಯಾಲಿ ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರು ಚಾಲನೆ ನೀಡಲಿದ್ದಾರೆ. ಸೆ.15 ರಂದು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಿರುವ ಸೈಕಲ್ ರ‍್ಯಾಲಿ ಗೆ ಬೆಳಿಗ್ಗೆ 08 ಗಂಟೆಗೆ ನೂತನ ಜಿಲ್ಲಾಡಳಿತ ಭವನದಿಂದ ಗಡಿಗಿ ಚೆನ್ನಪ್ಪ ವೃತ್ತದಿಂದ ಕನಕ ದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮಕ್ಕೆ ಮುಕ್ತಾಯಗೊಳ್ಳಲಿದೆ ಎಂದರು.
ರ‍್ಯಾಲಿ ಮಾರ್ಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಲಘು-ಉಪಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸ ಗಿರಿ ಸೇರಿದಂತೆ ಡಿಡಿಪಿಐ, ಡಿಡಿಪಿಯು ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್