ಬಳ್ಳಾರಿ, 14 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾನುವಾರ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು.
ಬಳ್ಳಾರಿಯಿಂದ ಬೆಂಗಳೂರುವರೆಗೆ ಬೈಕ್ ರ‍್ಯಾಲಿ ಆಯೋಜಿಸಿದ್ದು, ಅನುಭವಿತ ಹತ್ತು ದ್ವಿಚಕ್ರ ವಾಹನ ಸವಾರರು ಭಾನುವಾರ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿ ಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯಸರ್ಕಾರವು ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಆಯೋಜಿಸಲು ನಿರ್ದೇಶಿಸಿರುವ ಈ ಬೈಕ್ ರ‍್ಯಾಲಿಯು, ಸಂವಿಧಾನ ನೀಡಿರುವ ಪ್ರಜಾಪ್ರಭುತ್ವ ಮಹತ್ವ ಅರಿಯಲು ಮತ್ತು ಮತದಾನ ಹಕ್ಕು, ಮೂಲಭೂತ ಕರ್ತವ್ಯಗಳ ಕುರಿತು ಯುವ ಪೀಳಿಗೆಗೆ ಜಾಗೃತಿ ಮೂಡಿಸುವುದಾಗಿದೆ ಎಂದು ಹೇಳಿದರು.
ಅದೇ ರೀತಿಯಾಗಿ, ಜಿಲ್ಲಾ ಕೇಂದ್ರದಲ್ಲಿ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ನಗರದಲ್ಲಿ ಸೈಕಲ್ ರ‍್ಯಾಲಿ ನಡೆಯಲಿದೆ. ಸೈಕಲ್ ರ‍್ಯಾಲಿ ಗೆ ಬೆಳಿಗ್ಗೆ 08 ಗಂಟೆಗೆ ನೂತನ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಲಾಗುತ್ತದೆ. ಅಲ್ಲಿಂದ ರ‍್ಯಾಲಿಯು ಗಡಿಗಿ ಚೆನ್ನಪ್ಪ ವೃತ್ತ, ಕನಕ ದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಎಸ್.ಪಿ.ವೃತ್ತ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ಮುಕ್ತಾಯಗೊಳ್ಳಲಿದ್ದು, ಸಾರ್ವಜನಿಕರು ಭಾಗವಹಿಸಬಹುದು ಎಂದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಮಾತನಾಡಿ, ಜಿಲ್ಲೆಯಿಂದ ಹತ್ತು ಜನ ದ್ವಿಚಕ್ರ ವಾಹನ ಸವಾರರನ್ನು ಗುರುತಿಸಿ ಸುರಕ್ಷತಾ ಕ್ರಮದಿಂದ ರ‍್ಯಾಲಿ ಆಯೋಜಿಸಿದ್ದು, ರ‍್ಯಾಲಿಯು ಬಳ್ಳಾರಿಯಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಬೆಂಗಳೂರಿನ ವಿಧಾನ ಸೌಧತ್ತ ಹೊರಟು ಸೆ.15 ರಂದು ಅಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸೇರ್ಪಡೆ ಆಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಮಕೃಷ್ಣ ನಾಯಕ ಸೇರಿದಂತೆ ಜಿಲ್ಲೆಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್