ಗದಗ, 02 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆಪ್ಟೆಂಬರ್ 7 ರಂದು ಮಧ್ಯಾಹ್ನ 4 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಆಚರಿಸಲಾಗುತ್ತಿದ್ದು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿಯೂ ಸಹ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ಅಧ್ಯಯನ ಮಾಡಿದವರನ್ನು ಉಪನ್ಯಾಸಕ್ಕೆ ಆಹ್ವಾನಿಸಬೇಕು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಒಟ್ಟಾರೆಯಾಗಿ ಜಯಂತಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪರಶುರಾಮ ಈಳಗೇರ ಅವರನ್ನು ಉಪನ್ಯಾಸಕರನ್ನಾಗಿ ಆಯ್ಕೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಸಮಾಜದ ಬಾಂಧವರು, ಹಿರಿಯರು, ಗಣ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP