ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಸಭೆಯಲ್ಲಿ ಎಲ್ಲಾ ಸಾಧಕ - ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಲ್ಲ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗದ ನಂತರ ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲ ಮಾನದಂಡಗಳನ್ನು ಅನುಸರಿಸಿದ್ದಾರೆ ಎಂಬುದನ್ನು ನೋಡಬೇಕು. ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa