ಕೊಪ್ಪಳ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಯವರ 156ನೇ ಜಯಂತಿಯನ್ನು ಅಕ್ಟೋಬರ್ 2 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಅ. 2 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಪ್ರಿಯ ಭಜನೆಗಳು ಹಾಗೂ ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ, ನಾನಾ ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಂಡ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಸೇರಿದಂತೆ ಇತರೆ ಎಲ್ಲಾ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಹೇಳಿದರು.
ಅಂದು ಮಾಜಿ ಪ್ರಧಾನಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನವೂ ಇದ್ದು, ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಯವರ ಭಾವಚಿತ್ರಗಳಿಗೆ ಪೂಜೆ, ಪುಷ್ಪಾರ್ಚನೆ ಸಲ್ಲಿಸಬೇಕು. ಗಾಂಧೀಜಿ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ಭವನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 25 ರಂದು ಬೆಳಿಗ್ಗೆ 8 ಗಂಟೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಅ. 2ರಂದು ಗಾಂಧೀ ಜಯಂತಿ ದಿನದಂದು ತಮ್ಮ ಕಚೇರಿ ಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, ಅಕ್ಟೋಬರ್ 2ರಂದು ನಡೆಯುವ ಮಹಾತ್ಮ ಗಾಂಧೀಜಿ ಜಯಂತ್ಯೋತ್ಸವ ಕಾರ್ಯಕ್ರಮಕ್ಕಾಗಿ ವಹಿಸಿದ ಜವಾಬ್ದಾರಿಯನ್ನು ಆಯಾ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ನಿರ್ವಹಣೆ ಮಾಡಬೇಕು. ವೇದಿಕೆಯ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆಯಬೇಕು. ಮಹಾತ್ಮ ಗಾಂಧೀಜಿಯವರು ಖಾದಿ ಮತ್ತು ಸ್ವದೇಶಿ ವಸ್ತುಗಳ ಬಳಕೆಯ ಕುರಿತು ವಿಶೇಷ ಸಂದೇಶ ನೀಡಿದ್ದಾರೆ. ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಅ.2 ರಂದು ಜಿಲ್ಲಾಡಳಿತ ಭವನದಲ್ಲಿ ಆಡಿಟೋರಿಯಂ ಹಾಲ್‌ನಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುರೇಶ್ ಜಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್