ಹುಬ್ಬಳ್ಳಿ, 21 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ-ಜನಗಣತಿ ಸಮೀಕ್ಷೆಗೆ ಯಾವುದೇ ಅಧಿಕೃತ ಮಾನ್ಯತೆಯಿಲ್ಲ, ಅರ್ಥವೂ ಇಲ್ಲವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಜನಗಣತಿ ಮಾಡುತ್ತದೆ. ಆ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ. ರಾಜ್ಯ ಸರ್ಕಾರ ನಡೆಸುತ್ತಿರುವುದು ಸಮೀಕ್ಷೆಯಷ್ಟೇ. ಇದಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.
ಸಮಾಜ ದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲಿ ಸಹ ಇದರ ಪರಿಣಾಮ ಕಾಣುತ್ತಿದೆ ಎಂದು ತೀವ್ರವಾಗಿ ಖಂಡಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಆಧಾರದ ಮೇಲೆ ಜಾತಿ ಸಮೀಕ್ಷೆ ಮಾಡುತ್ತಿದೆ? ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಎಂದು ಯಾವ ಆಧಾರ ಮೇಲೆ ಮಾಡಲು ಹೊರಟಿದ್ದೀರಿ? ಎಂದು ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅಲ್ಟ್ರಾ ಲೆಫ್ಟಿಸ್ಟ್ ಆಗಿದ್ದಾರೆ. ಜಾತಿ ಜನಗಣತಿ ಎಂದು ಕಳೆದ ಬಾರಿ ₹400 ಕೋಟಿ ಕಳೆದಿದ್ದಾರೆ. ಈ ಬಾರಿಯೂ ₹400 ಕೋಟಿ ಕಳೆಯುತ್ತಿದ್ದಾರೆ ಅಷ್ಟೇ. ಅದರ ವಿನಾಃ ಬೇರೇನೂ ಆಗುವುದಿಲ್ಲ. ಇದಕ್ಕೆ ಯಾವುದೇ ಮನ್ನಣೆ-ಮಾನ್ಯತೆ ಸಿಗುವುದಿಲ್ಲ ಎಂದು ಜೋಶಿ ಹೇಳಿದರು.
ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಜಾತಿ ಸಮೀಕ್ಷೆ ಮಾಡಿದರೆ ಒಕ್ಕಲಿಗ ಸಮಾಜದಲ್ಲಿ ತಮ್ಮ ನಾಯಕತ್ವ ಹೋಗಲಿದೆ ಎಂಬ ಸತ್ಯ ಡಿಕೆಶಿ ಅರಿವಿಗೆ ಬಂದಿದೆ. ಹಾಗಾಗಿ ಅವರೂ ಸೇರಿದಂತೆ ಕಾಂಗ್ರೆಸ್‌ನ ಸಚಿವರುಗಳೇ ಇದರ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.
ನಕಲಿ ಗಾಂಧಿಗಳ ಅಣತಿಯಂತೆ ಸಿದ್ದರಾಮಯ್ಯ ಅವರು ಹಿಂದೂ ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರೇರಣೆ, ಸೂಚನೆಯಂತೆ ನುಸುಳುಕೋರರಿಗೆ ಮತದಾನದ ಹಕ್ಕುʼ ಕೊಟ್ಟು ದೇಶವನ್ನು ಅಶಕ್ತಗೊಳಿಸುವ ಷಡ್ಯಂತ್ರದ ಭಾಗ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಗೆ ಆಕ್ರೋಶ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa