ಬಳ್ಳಾರಿ, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದಾದ್ಯಂತ ಆರಂಭಗೊ0ಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಡೆಸುವ ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಬಳ್ಳಾರಿ ನಗರದ ಗುಗ್ಗರಹಟ್ಟಿಯ ವೆಂಕಟಮ್ಮ ಕಾಲೋನಿಯಲ್ಲಿ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಸಮೀಕ್ಷೆಯು ಆರಂಭಗೊ0ಡಿದೆ. ಈ ಸಮೀಕ್ಷಾ ಕಾರ್ಯವು ಅಕ್ಟೋಬರ್ 7 ರ ವರೆಗೆ ನಡೆಯಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. 60 ಪ್ರಶ್ನಾವಳಿಗಳುಳ್ಳ ಸಮೀಕ್ಷಾ ಕಾರ್ಯವು ಆಪ್ ಮೂಲಕ ನಡೆಯಲಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು.
ಸಮೀಕ್ಷಾ ಕಾರ್ಯಕ್ಕೆ ತರಬೇತಿ ಪಡೆದ ಮಾಸ್ಟರ್ ಟ್ರೇನರ್‌ಗಳು ತಮ್ಮ ಕೆಳಹಂತದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಮಾರ್ಗದರ್ಶನ ಮಾಡಲಾಗಿದೆ. ಪ್ರತಿ 108 ಮನೆಗಳಿಗೆ ಒಬ್ಬ ಗಣತಿದಾರ, 20 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರಂತೆ ನೇಮಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಯಾವ ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಸೇರಿದಂತೆ ಸಮೀಕ್ಷಾದಾರರು, ಸಾರ್ವಜನಿಕರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್