ಕೊಪ್ಪಳ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ಯೋಜನೆಯ ಬಹದ್ದೂರುಬಂಡಿಯ ಸಮುದಾಯ ಭವನದಲ್ಲಿ 8 ನೇ ರಾಷ್ಟಿಯ ಪೋಷಣ್ ಮಾಸಾಚರಣೆಯ ಅಂಗವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ ಅವರು ಕ್ರಮಬದ್ಧ ಆಹಾರ ಸೇವನೆಯಿಂದ ಆರೋಗ್ಯವಂತ ಮಗುವಿಗೆ ತಾಯಿ ಜನ್ಮ ನೀಡಲು ಸಹಾಯಕವಾಗುತ್ತದೆ. ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಪೌಷ್ಟಿಕ ಆಹಾರ ಸೇವನೆ ತುಂಬಾ ಮುಖ್ಯ. ಆಹಾರದಲ್ಲಿ ವೈವಿಧ್ಯತೆ ಕಂಡುಕೊಳ್ಳಿ ಎಂದು ಹೇಳಿದರು.
ಬಹದ್ದೂರ ಬಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಯೋಗಾನಂದ ಲೇಬಗೇರಿ ಅವರು ಮಾತನಾಡಿ, ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು ಎಲ್ಲಾ ಗರ್ಭಿಣಿ, ಬಾಣಂತಿಯರು ಆರೋಗ್ಯಕರ ಮಗುವಿಗೆ ಜನ್ಮ ನೀಡುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳನ್ನು ತಿಳಿಸಿದರು. ಅಂಗನವಾಡಿ ಕೇಂದ್ರದಲ್ಲಿ ಪಡೆಯುವ ಎಲ್ಲಾ ಪೌಷ್ಟಿಕ ಆಹಾರಗಳನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತಿಳಿಸಿದರು. ಸಕಾಲಕ್ಕೆ ಗರ್ಭಿಣಿ, ಬಾಣಂತಿಯರು ಚುಚ್ಚು ಮದ್ದು ತೆಗೆದುಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ, ಶಾಲಾ ಮುಖ್ಯೋಪಾಧ್ಯಾಯರಾದ ಬೀರಪ್ಪ ಅಂಡಗಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಬಸವರಾಜ ಕಿರ್ದ, ಸೇರಿದಂತೆ ಗ್ರಾಮ ಪಂಚಾಯತಿ ಸರ್ವ ಸದಸ್ಯರು, ಗರ್ಭಿಣಿ, ಬಾಣಂತಿಯರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್