ಹುಲಗಿ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಗುರುವಾರ ಹುಲಗಿಯಲ್ಲಿ 8 ನೇ ಪೋಷಣ್ ಮಾಸಾಚರಣೆಯ ಅಂಗವಾಗಿ ಸ್ಥಳೀಯವಾಗಿ ಲಭ್ಯವಿರುವ ಪದಾರ್ಥಗಳನ್ನು ಬಳಸಿಕೊಂಡು ಪೂರಕ ಆಹಾರ ಪ್ರದರ್ಶನಗಳನ್ನು ಉತ್ತೇಜಿಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು, ಸ್ಥಳೀಯವಾಗಿ ಲಭ್ಯವಿರುವ ಪದಾರ್ಥಗಳನ್ನು ಬಳಸಿಕೊಂಡು ಪೂರಕ ಆಹಾರ ಪ್ರದರ್ಶನಗಳನ್ನು ಉತ್ತೇಜಿಸುವುದು ಅತ್ಯಂತ ಪರಿಣಾಮಕಾರಿ ಕ್ರಮ. ಇದರಿಂದ ಪೋಷಕರು ಮತ್ತು ಸಮುದಾಯ ಸದಸ್ಯರಿಗೆ ಕಡಿಮೆ ವೆಚ್ಚದಲ್ಲಿ, ಸುಲಭವಾಗಿ ದೊರೆಯುವ ಆಹಾರಗಳಿಂದ ಪೌಷ್ಟಿಕಾಂಶ ತುಂಬಿರುವ ಆಹಾರ ತಯಾರಿಸುವ ವಿಧಾನ ತಿಳಿದುಕೊಳ್ಳಲು ಸಹಾಯವಾಗುತ್ತದೆ ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ ಅವರು ಮಾತನಾಡಿ, ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು ಎಲ್ಲಾ ಗರ್ಭಿಣಿ, ಬಾಣಂತಿಯರು ಆರೋಗ್ಯಕರ ಮಗುವಿಗೆ ಜನ್ಮ ನೀಡುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳನ್ನು ತಿಳಿಸಿದರು. ಅಂಗನವಾಡಿ ಕೇಂದ್ರದಲ್ಲಿ ಪಡೆಯುವ ಎಲ್ಲಾ ಪೌಷ್ಟಿಕ ಆಹಾರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಗಂಧದ್, ಶಿವಶರಣಪ್ಪ ಗದ್ದಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ಗುಂಗಾಡಿ, ಗ್ರಾಮ ಪಂಚಾಯತಿ ಸದಸ್ಯರು, ಗರ್ಭಿಣಿ, ಬಾಣಂತಿಯರು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಅನ್ನಪ್ರಾಶಣ, ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್