ಮೈಸೂರು, 26 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳನ್ನು ಅತಂತ್ರಗೊಳಿಸುವುದು ಸರಿಯಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬೇರೆ ಬೇರೆ ರಾಜ್ಯಗಳಲ್ಲಿ ನೇಮಕಾತಿ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ರಾಜ್ಯ ಸರ್ಕಾರ ನೇಮಕಾತಿ ನಡೆಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ ಎಂದರು.
ರಾಜ್ಯದ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೂ ನೇಮಕಾತಿ ಮಾಡಲಾಗುತ್ತಿಲ್ಲ. ಅಲ್ಲದೇ, ಹೊಸದಾಗಿ ಸಹ ಯಾವುದೇ ಹುದ್ದೆಗಳ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳದಿರುವುದು ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ ಎಂದರು.
ರಾಜ್ಯದಲ್ಲಿ ಸದ್ಯ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ವಯೋಮಿತಿ ಮೀರುವ ಆತಂಕ ಕಾಡುತ್ತಿದೆ. ಹಾಗಾಗಿ ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಹಾಗೇ ಬಿಡುವುದು ಸರಿಯಲ್ಲ. ಹೊಸದಾಗಿ ಅಲ್ಲದಿದ್ದರೂ ಖಾಲಿ ಇರುವ ಹುದ್ದೆಗಳಿಗಾದರೂ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿಲ್ಲ ಎಂಬ ಆರೋಪ ಪ್ರಮುಖವಾಗಿ ಕೇಳಿಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಅವರಲ್ಲಿ ಚರ್ಚಿಸಿದ್ದು, ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ. ಆದರೆ, ವಯಸ್ಸಿನ ಸಡಿಲಿಕೆ ಕುರಿತು ಸರ್ಕಾರ ಸ್ಪಷ್ಟಪಡಿಸಬೇಕು. ಅಭ್ಯರ್ಥಿಗಳನ್ನು ಅತಂತ್ರಗೊಳಿಸುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa