ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು.
ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa