ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಕ್ಟೋಬರ್ 6 ರಂದು ಕೊಪ್ಪಳದಲ್ಲಿ ನಡೆಯಲಿರುವ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಕ್ಟೋಬರ್ 6 ರಂದು ಕೊಪ್ಪಳದಲ್ಲಿ ನಡೆಯಲಿರುವ ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಹೇಳಿದ್ದಾರೆ.

ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್‍ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮ ಯಶಸ್ವಿಯಾಗಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ನಿಮಗೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದರು.

ಅದೇ ರೀತಿ ನಮ್ಮ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಸಹ ತಮ್ಮ ವ್ಯಾಪ್ತಿಯಲ್ಲಿನ ಫಲಾನುಭವಿಗಳನ್ನು ಕರೆತರಲು ಅಧಿಕಾರಿಗಳಿಗೆ ಸಹಕರಿಸಿ ಈ ಕಾರ್ಯಕ್ರಮವನ್ನು ಎಲ್ಲರೂ ಒಟ್ಟಾಗಿ ಸೇರಿ ಯಶಸ್ವಿಗೊಳಿಸೋಣ ಎಂದು ಹೇಳಿದರು.

ಪ್ರತಿಯೊಂದು ಬೂತ್ ಮಟ್ಟದಲ್ಲಿ ಬಸ್ ವ್ಯವಸ್ಥೆ ಮಾಡಬೇಕು. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರುವ ಜನರನ್ನು ಸುರಕ್ಷಿತವಾಗಿ ಕರೆ ತರಬೇಕು. ವಿಶೇಷವಾಗಿ ಗೃಹಲಕ್ಷ್ಮೀ ಫಲಾನುಭವಿಗಳಾದ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು. ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ನಮ್ಮ ಜಿಲ್ಲೆಯಲ್ಲಿನ ಫಲಾನುಭವಿಗಳ ಪಟ್ಟಿಮಾಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು ಸಣ್ಣ ಉದ್ಯಮ ಪ್ರಾರಂಭಿಸಿದವರು, ಹೈನುಗಾರಿಕೆ ಮಾಡುತ್ತಿರುವವರು ಹಾಗೂ ಇತರೆ ಉತ್ತಮ ಕಾರ್ಯಕ್ಕೆ ಈ ಯೋಜನೆ ಬಳಸಿಕೊಂಡವರ ವಿಡಿಯೋ ಮತ್ತು ಫೋಟೋ ಗಳನ್ನು ಸಂಗ್ರಹಿಸಿ, ಅದನ್ನು ಒಂದು ಬುಕ್‍ಲೆಟ್ ತಯಾರಿಸಿ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಂದ ಬಿಡುಗಡೆಗೊಳಿಸೋಣ ಎಂದರು.

ಜಿಲ್ಲೆಯಲ್ಲಿ ಕಾರ್ಯಕ್ರಮಕ್ಕೆ ಜನರನ್ನು ಕರೆ ತರಲು ಒಟ್ಟು 1,537 ಬಸ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ತಾಲ್ಲೂಕುವಾರು ಜನಸಂಖ್ಯೆಗೆ ಅನುಗುಣವಾಗಿ ಬಸ್ ಕಲ್ಪಿಸಲಾಗುವುದು. ಸಿಡಿಪಿಒ ಮತ್ತು ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಕರೆತರಲು ಎಲ್ಲಾ ರೀತಿಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಜಿಲ್ಲೆಯ ಎಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ನಮ್ಮ ಅಧಿಕಾರಿಗಳಿಗೆ ಸಹಕರಿಸಬೇಕು ಎಂದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಯ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ಕಾಸಿಮ್ ಸಾಬ್ ಮರ್ದಾನ್ ಸಾಬ್, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande