ಕೊಪ್ಪಳ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಕ್ಟೋಬರ್ 6 ರಂದು ಕೊಪ್ಪಳ ಜಿಲ್ಲೆಯ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆ ಅಧಿಕಾರಿಗಳಿಗೆ ಕರೆದ ಎರಡನೇ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕಳೆದ ಎರಡುವರೆ ವರ್ಷಗಳ ಅವಧಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಯನ್ನು ಜಾರಿಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಗ್ಯಾರಂಟಿ ಯೋಜನೆಗಳ ಲಾಭಸಿಗುವಂತೆ ಮಾಡಿದೆ. ಇದರ ಜೊತೆಗೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿಶೆಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲು ಮುಖ್ಯಮಂತ್ರಿಗಳು ಕೊಪ್ಪಳಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಈಗಾಗಲೇ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ನುರಿತ ಕಲಾವಿದರು ಮತ್ತು ಉತ್ತಮ ಕಲಾ ತಂಡದ ವ್ಯವಸ್ಥೆ ಮಾಡಬೇಕು. ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು. ಸಾರ್ವಜನಿಕರಿಗೆ ಕೂಡಲು ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಊಟದ ವ್ಯವಸ್ಥೆ ಮತ್ತು ತಾತ್ಕಾಲಿಕ ಶೌಚಾಲಯದ ವ್ಯವಸ್ಥೆಗೂ ಕ್ರಮ ಕೈಗೊಳ್ಳಿ. ದೊಡ್ಡ ಕಾರ್ಯಕ್ರಮ ಆಗಿರುವುದರಿಂದ ಯಾವುದೇ ಸಮಸ್ಯೆಗಳಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳು ಹಾಗೂ 5 ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚು ಜನರು ಪಾಲ್ಗೊಳ್ಳುವಂತಾಗಬೇಕು ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹಾನಿಯಾದ ಬೆಳೆಗಳಿಗೆ ತಕ್ಷಣ ಪರಿಹಾರ ನೀಡಲು ಆಯಾ ತಾಲ್ಲೂಕುಗಳ ತಹಶಿಲ್ದಾರರು ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅಕ್ಟೋಬರ್ 5 ರೊಳಗೆ ಪೂರ್ಣಗೊಳಿಸುವಂತೆ ಗಣತಿದಾರರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ಸರಕಾರದ ಕಾರ್ಯಕ್ರಮ ಆಗಿರುವುದರಿಂದ ಜಿಲ್ಲಾಧಿಕಾರಿಗಳು ಕಾರ್ಯಕ್ರಮದ ಕುರಿತು ಏನೇನು ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ನೀಡಿ. ಎಷ್ಟು ಜನ ಬರುತ್ತಾರೆ. ಸಾರಿಗೆ, ಪೆಂಡಾಲ, ಆಹಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಗ್ರಾಮವಾರು ಕಮಿಟಿ ಮಾಡಿ ಜನರನ್ನು ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆ ಆಗಬೇಕೆಂದರು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ ತಮ್ಮ ನಿರ್ದೆಶನದಂತೆ ಕಾಮಗಾರಿಗಳ ಪಟ್ಟಿಯನ್ನು ತಯಾರಿಸಲಾಗಿದೆ. 2 ಸಾವಿರ 5 ಕೋಟಿ ರೂ.ಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿವೆ. ಪ್ರತಿ ತಾಲ್ಲೂಕುವಾರು ತಹಶಿಲ್ದಾರ ಮತ್ತು ಇಓ ಗಳನ್ನು ಒಳಗೊಂಡ ಸಮಿತಿ ಮಾಡಲಾಗಿದೆ. ಪ್ರತಿ ಭೂತಿಗೆ ಒಂದು ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಒಟ್ಟು 1500 ಸರಕಾರಿ ಬಸ್ಸುಗಳು ಮತ್ತು 100 ಖಾಸಗಿ ಬಸ್ಸುಗಳನ್ನು ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬರಲು ವ್ಯವಸ್ಥೆ ಮಾಡಲಾಗಿದೆ. 83,655 ಫಲಾನುಭವಿಗಳ ಪಟ್ಟಿ ಮಾಡಲಾಗಿದೆ. ಗೃಹಲಕ್ಷ್ಮೀ, ನರೇಗಾ, ಅನ್ನಭಾಗ್ಯ ಸೇರಿದಂತೆ ವಿವಿಧ ಫಲಾನುಭವಿಗಳ ಪಟ್ಟಿ ತೈಯಾರಿಸಲಾಗಿದೆ. ಊಟದ ಟೆಂಡರ್ ಕರೆದು ವ್ಯವಸ್ಥೆ ಮಾಡಲಾಗಿದೆ ಜನರಿಗೆ ತೊಂದರೆಯಾಗದಂತೆ 100 ಊಟದ ಕೌಂಟರಗಳನ್ನು ಮಾಡಲಾಗುತ್ತಿದೆ. ಸ್ಟೇಜ ಕೆಲಸ ನಡೆಯುತ್ತಿದೆ. ಸ್ಟೇಜ ಪಕ್ಕದಲ್ಲಿ ಇಲಾಖೆಯ ಮಳಿಗೆಗಳನ್ನು ಹಾಕಲಾಗುತ್ತಿದೆ. ಈ ಕಾರ್ಯಕ್ರಮ ಮುಗಿಯುವವರೆಗೆ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾರು ರಜೆಯ ಮೇಲೆ ಹೋಗಭಾರದು ಎಂದು ಹೇಳಿದರು.
ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀ ನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್