ಗದಗ, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಂಡು ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರುಗಳ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಮಟ್ಟದಿಂದ ಆಯ್ಕೆಯಾಗಿ ಜಿಲ್ಲಾ ಮಟ್ಟದಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳು ಬಂದಿದ್ದು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಪಾಲ್ಗೊಂಡು ಗದಗ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಅವರು ಮಾತನಾಡಿ ಗದಗ ಜಿಲ್ಲೆಯ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಹಾಕಿ ಕ್ರೀಡೆಯಲ್ಲಿ ರಾಜು ಬಗಾಡೆ, ಕುಸ್ತಿಯಲ್ಲಿ ಪ್ರೇಮಾ ಹುಚ್ಚಣ್ಣವರ, ಸೈಕ್ಲಿಂಗ್‌ದಲ್ಲಿ ಕು. ಮಲ್ಲಿಗವಾಡ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ. ಸ್ವತ: ನನ್ನ ಸಹೋದರಿ ದಾಕ್ಷಾಯಣಿ ಅಸೂಟಿ ಅವರೂ ಕೂಡ ಈ ಹಿಂದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ 1500 ಮೀ, 3000 ಮೀ ಓಟದಲ್ಲಿ ಕ್ರೀಡಾ ಪ್ರಶಸ್ತಿ ತಂದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳೂ ಸಹ ರಾಜ್ಯ ಮಟ್ಟದಲ್ಲಿಯೂ ಗದಗ ಜಿಲ್ಲೆಯ ಹೆಸರು ತರಬೇಕೆಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ. ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು ಸೆಪ್ಟೆಂಬರ್ 3 ಹಾಗೂ 4 ರಂದು ಎರಡು ದಿನಗಳ ಕಾಲ ಜರುಗುತ್ತಿವೆ. ಗದಗ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕೆಂದರು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ, ವಾಸು ಕಲಕಂಬಿ,ರಜಿತ ಚವ್ಹಾಣ, ದೈಹಿಕ ಶಿಕ್ಷಕರು, ಕ್ರೀಡಾಪಟುಗಳು ಹಾಜರಿದ್ದರು.
ಕೆ.ಕೆ.ಪಿ.ಪಿ.ಜಿ.ಸಂಗೀತ ಪಾಠಶಾಲೆ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು.
ಎಂ.ಎ.ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ಶಿರಹಟ್ಟಿ ಸಹಾಯಕ ಯುವಜನ ಕ್ರೀಡಾದಿಕಾರಿ ಎಂ.ಡಿ.ತಳ್ಳಳ್ಳಿ ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP