ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕೊಳ್ಳಗಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಾವಿರಾರು ಕೋಟಿ ರೂಪಾಯಿಗಳ ಹೂಡಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಪ್ರಮುಖ ಪಾತ್ರವಹಿಸಿದ್ದಾರೆ ಎಂಬ ಆಧಾರದ ಮೇಲೆ ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಅವರನ್ನು ಬಂಧಿಸಿದ್ದರು. ನಂತರ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ವೇಳೆ ಹಲವು ಮಹತ್ವದ ಮಾಹಿತಿ ಲಭ್ಯವಾಗಿತ್ತು.
ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಾಳಿ ನಡೆಸಿ ಅಕ್ರಮ ಹಣ ಹೂಡಿಕೆ ಹಾಗೂ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆಯ ಪ್ರಾಥಮಿಕ ಹಂತದಲ್ಲಿ ಸುಮಾರು 7,000 ಕೋಟಿ ರೂಪಾಯಿ ಅಕ್ರಮ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಆಗಸ್ಟ್ 22ರಂದು ಮುಂಜಾನೆ 5 ಗಂಟೆಯಿಂದಲೇ ವಿರೇಂದ್ರ ನಿವಾಸದಲ್ಲಿ ಇಡಿ ದಾಳಿ ನಡೆದಿತ್ತು. ಆ ದಾಳಿಯಲ್ಲಿ ಮಧ್ಯರಾತ್ರಿ ತನಕ ದಾಖಲೆಗಳ ಪರಿಶೀಲನೆ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಸಂಪತ್ತು ಹಾಗೂ ನಗದು ಹಾಗೂ ಐಶಾರಾಮಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa