
ಗದಗ, 10 ಜನವರಿ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತಿನ ಅರಿವು ಮೂಡಿಸುವ ಉದ್ದೇಶದಿಂದ ಜಿ.ಎನ್.ಟಿ.ಟಿ.ಎಫ್ ಹಾಗೂ ಎಚ್.ಕೆ. ಪಾಟೀಲ ಪ್ರತಿಷ್ಠಾನದ ಸಹಯೋಗದಲ್ಲಿ ಜಿಲ್ಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೃಷ್ಣಗೌಡ ಪಾಟೀಲ ತಿಳಿಸಿದ್ದಾರೆ.
ಗದಗ ನಗರದ ಜಿ.ಎನ್.ಟಿ.ಟಿ.ಎಫ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಮುಖಿ ಕಾರ್ಯಗಳ ಭಾಗವಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ರಸಪ್ರಶ್ನೆ ಸ್ಪರ್ಧೆಯ ಮೂಲಕ ಜಿಲ್ಲೆಯ 138 ಪ್ರೌಢಶಾಲೆಗಳ ಸುಮಾರು 13,500 ವಿದ್ಯಾರ್ಥಿಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ವಿವಿಧ ಹಂತಗಳಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಕರ್ಷಕ ನಗದು ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನವಾಗಿ 5 ಸಾವಿರ ರೂ., ದ್ವಿತೀಯ ಬಹುಮಾನವಾಗಿ 3 ಸಾವಿರ ರೂ. ಹಾಗೂ ತೃತೀಯ ಬಹುಮಾನವಾಗಿ 2 ಸಾವಿರ ರೂ. ನಿಗದಿಪಡಿಸಲಾಗಿದೆ. ಬೆಳಗಾವಿಯ ವಿನೋದ ದೇಶಪಾಂಡೆ ಅವರ ನೇತೃತ್ವದ ತಜ್ಞರ ತಂಡವು ಸ್ಪರ್ಧೆಯನ್ನು ವ್ಯವಸ್ಥಿತವಾಗಿ ನಡೆಸಿಕೊಡಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಲೆಕ್ಕ ಪರಿಶೋಧಕ ಆನಂದ ಪೊತ್ನಿಸ್, ಜ. 17 ಮತ್ತು ಜ. 24ರಂದು ಜಿ.ಎನ್.ಟಿ.ಟಿ.ಎಫ್ ಆವರಣದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ದೂರದ ಊರುಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಜೊತೆಗೆ ಪಾಲ್ಗೊಳ್ಳುವ ಎಲ್ಲ ವಿದ್ಯಾರ್ಥಿಗಳಿಗೆ ಉಪಾಹಾರ ಹಾಗೂ ಲಘು ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದರು.
ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಇಂತಹ ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿವೆ. ಹೀಗಾಗಿ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / lalita MP