
ಕಲಬುರಗಿ, 10 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಜನರಿಗೆ ನೀಡಿದ್ದ ಭರವಸೆಯಂತೆ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ಜನರ ಅಗತ್ಯ ಮತ್ತು ಬೇಡಿಕೆಗೆ ಅನುಗುಣವಾಗಿ ನೂತನ ಆರೋಗ್ಯ ಕೇಂದ್ರಗಳ ಸ್ಥಾಪನೆ ಹಾಗೂ ಹಾಲಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಮಹತ್ವದ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಹಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಅಗತ್ಯವಿತ್ತು. ಈ ದಿಸೆಯಲ್ಲಿ ಆರೋಗ್ಯ ಇಲಾಖೆಯು ಕಲಬುರಗಿ ತಾಲೂಕಿನ ಫರತಾಬಾದ್, ಹಿರೇಸಾವಳಿಗೆ ಹಾಗೂ ಜೇವರ್ಗಿ ತಾಲೂಕಿನ ಇಜೇರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಿದೆ.
ಇದಲ್ಲದೆ, ಚಿತ್ತಾಪುರ ತಾಲೂಕಿನ ಕಾಳಗಿ ಹಾಗೂ ಜೇವರ್ಗಿ ತಾಲೂಕಿನ ಯಡ್ರಾಮಿ ಗ್ರಾಮಗಳಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಗಳನ್ನು 50 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.
ಆರೋಗ್ಯ ಸೌಲಭ್ಯಗಳ ವಿಸ್ತರಣೆಗಾಗಿ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕೆಂಬ ತಮ್ಮ ಮನವಿಯನ್ನು ಆದ್ಯತೆಯಾಗಿ ಪರಿಗಣಿಸಿ ಸ್ಪಂದಿಸಿದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಮೇಲ್ದರ್ಜೆ ಕಾರ್ಯದಿಂದ ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಇನ್ನಷ್ಟು ಸುಲಭವಾಗಿ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa